ಡಿವಿಜಿ ಸುದ್ದಿ, ಬೆಂಗಳೂರು: ಈಗಾಗಲೇ ಐದು ವರ್ಷ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವ ಸರ್ಕಾರದ ಕ್ರಮವನ್ನು ಸರಿಯಾಗಿದೆ ಎಂದು ಹೈಕೋರ್ಟ್ ಎತ್ತಿ ಹಿಡಿದಿದೆ.
ಸರ್ಕಾರದ ಹೊರಡಿಸಿರುವ ಆದೇಶ ರದ್ದುಗೊಳಿಸುವಂತೆ ಚಳ್ಳಕೆರೆ ತಾಲ್ಲೂಕು ಸೋಮಗುದ್ದಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್.ಸತೀಶ್ ಬಾಬು ಸೇರಿದಂತೆ ಒಟ್ಟು 16 ಜನ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ತಿರಸ್ಕರಿಸಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಯ ಕಲಂ 8ರ ಅನುಸಾರ ಆಡಳಿತಾಧಿಕಾರಿ ನೇಮಿಸಲು ಮುಂದಾಗಿರುವ ಪಂಚಾಯಿತಿಗಳ ಅವಧಿ ಮುಗಿದಿದೆ. ಕಲಂ 8ರ ಅನುಸಾರ ಒಂದು ಬಾರಿ ಆಡಳಿತಾಧಿಕಾರಿ ನೇಮಕವಾದರೆ ಅವರು ಚುನಾಯಿತ ಪ್ರತಿನಿಧಿಗಳಿಗೆ ಸಮಾನ ಎಂದು ಹೈಕೋರ್ಟ್ ತಿಳಿಸಿದೆ.
ಕೋವಿಡ್-19 ಇರುವ ಕಾರಣ ಜನಸಾಮಾನ್ಯರಿಗೆ ಸ್ಪಂದಿಸಲು ಆಡಳಿತಾಧಿಕಾರಿಗಳಿಗೆ ಸಾಧ್ಯವಾಗುವುದಿಲ್ಲ. ಹೀಗಾಗಿ ಮುಂದಿನ ಚುನಾಯಿತ ಪ್ರತಿನಿಧಿಗಳ ಆಯ್ಕೆಗುವ ವರೆಗೆ ನಮ್ಮನ್ನೇ ಮುಂದುವರಿಸಬೇಕು ಎಂಬ ಅರ್ಜಿದಾರರ ವಾದ ಸರಿಯಲ್ಲ ಎಂದಿದೆ.



