ಡಿವಿಜಿ ಸುದ್ದಿ, ಹೊಸಪೇಟೆ: ಕೊರೊನಾದಿಂದ ಮೃತರಾದವರಿಗೆ ಪ್ರತ್ಯೇಕವಾದ ಜಾಗ ಗುರುತತಿ ಅಲ್ಲಿಯೇ ದಫನ್ ಮಾಡಲಾಗುವುದು ಎಂದು ಬಳ್ಳಾರಿ ಸಂಸದ ವೈ. ದೇವೇಂದ್ರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವೊಂದು ಕಡೆ ಅವೈಜ್ಞಾನಿಕವಾಗಿ ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನಡೆದಿದೆ. ಭವಿಷ್ಯದಲ್ಲಿ ಅಮಾನವೀಯ ರೀತಿಯಲ್ಲಿ ಶವಸಂಸ್ಕಾರ ಆಗದಂತೆ ನೋಡಿಕೊಳ್ಳಲಾಗುವುದು ಎಂದರು.
ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಸೂಕ್ತ ಜಾಗದ ಹುಡುಕಾಟ ನಡೆದಿದೆ. ಹೆಚ್ಚುವರಿ ಆಂಬ್ಯುಲೆನ್ಸ್, ವೈದ್ಯಕೀಯ ಸಿಬ್ಬಂದಿ ಜಿಲ್ಲೆಗೆ ಕೊಡಬೇಕೆಂದು ಮುಖ್ಯಮಂತ್ರಿಗೆ ಮನವಿ ಮಾಡಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ ಏಕಾಏಕಿ ಹೆಚ್ಚಾಗಿರುವುದಕ್ಕೆ ಎಲ್ಲರೂ ಆತಂಕಗೊಂಡಿದ್ದಾರೆ. ಅದನ್ನು ತಗ್ಗಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದದು ತಿಳಿಸಿದರು.
ರಾಜ್ಯ, ಕೇಂದ್ರ ಸರ್ಕಾರಗಳು ಸಕಾಲಕ್ಕೆ ಕೈಗೊಂಡ ಆರ್ಥಿಕ ಪುನಶ್ಚೇತನದ ಕ್ರಮಗಳಿಂದ ಪರಿಸ್ಥಿತಿ ಸುಧಾರಿಸುತ್ತಿದೆ. ಆತ್ಮ ನಿರ್ಭರ ಭಾರತ್ ಯೋಜನೆಯಡಿ ಲಕ್ಷಾಂತರ ಜನರಿಗೆ ನೆರವು ನೀಡಲಾಗಿದೆ. ಸಂಕಷ್ಟದ ಪರಿಸ್ಥಿತಿಯಲ್ಲಿ ಕಾರ್ಯಕರ್ತರು ಸರ್ಕಾರದ ಜತೆ ಕೈಜೋಡಿಸಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ, ಉಪಾಧ್ಯಕ್ಷ ಅನಂತ ಸ್ವಾಮಿ, ಮಂಡಲ ಅಧ್ಯಕ್ಷ ಬಸವರಾಜ ನಾಲತ್ವಾಡ, ಪ್ರಧಾನ ಕಾರ್ಯದರ್ಶಿ ಶಂಕರ್ ಮೇಟಿ, ಜೀವರತ್ನಂ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಕವಿತಾ ಈಶ್ವರ್ ಸಿಂಗ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



