ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜು.12ರಿಂದ 16ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅದರಲ್ಲೂ ತುಮಕೂರು, ಶಿವಮೊಗ್ಗ, ರಾಮನಗರ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾನುವಾರದಂದು ಗುಡುಗು, ಸಿಡಿಲು ಸಹಿತ ಮಳೆಯಾಗುವ ನಿರೀಕ್ಷೆಯಿದ್ದು, ಎಲ್ಲ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನಲ್ಲಿ ಮಳೆ ತಗ್ಗಿದೆ. ಸೋಮವಾರದಿಂದ ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಕರಾವಳಿಯಲ್ಲಿ ವೇಗವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಗರಿಷ್ಠ 11 ಸೆಂ.ಮೀ ಮಳೆಯಾಗಿದೆ. ಕಾರವಾರ 10, ಭಟ್ಕಳ, ಕುಂದಾಪುರ 4, ಕಮಲಾಪುರ 3, ಬೀದರ್, ಚಿಂಚೋಳಿ, ಸಿಂಧನೂರು 2, ಬೈಲಹೊಂಗಲ, ನರಗುಂದ, ಕಲಬುರ್ಗಿ, ಕೋಲಾರ, ಹೊಸಕೋಟೆ, ಗೌರಿಬಿದನೂರು, ಮಧುಗಿರಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.



