ಡಿವಿಜಿ ಸುದ್ದಿ, ಶಿವಮೊಗ್ಗ: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಲಾಕ್ಡೌನ್ ಮಾಡಬೇಕಾ, ಬೇಡ್ವಾ ಎನ್ನುವ ಕುರಿತು ನಾಳೆ (ಮಂಗಳವಾರ) ನಿರ್ಧಾರ ಮಾಡುವುದಾಗಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದ ಸಚಿವರು, ಇತ್ತೀಚೆಗೆ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ನಾಳೆಯಿಂದ ಒಂದು ವಾರಗಳ ಕಾಲ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಸರ್ಕಾರ ಲಾಕ್ ಡೌನ್ ಮಾಡಿ ಆದೇಶಿಸಿದೆ.
ಶಿವಮೊಗ್ಗ ಜಿಲ್ಲೆಯಲ್ಲಿಯೂ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯ ವರ್ತಕರೇ ಮುಂಜಾನೆ 8 ರಿಂದ ಮಧ್ಯಾಹ್ನ 3ರವರೆಗೆ ವ್ಯಾಪಾರ ವಹಿವಾಟು ನಡೆಸಿ ನಂತರ ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ಮಾಡುತ್ತಿದ್ದಾರೆ. ಹೀಗಿದ್ದರೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮಾತ್ರ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅವರ ಜೊತೆ ಚರ್ಚಿಸಿ ಶಿವಮೊಗ್ಗದಲ್ಲಿಯೂ ಲಾಕ್ ಡೌನ್ ಮಾಡಬೇಕಾ ಅಥವಾ ಬೇಡವಾ ಎಂಬುದನ್ನು ಕುರಿತು ನಿರ್ಧಾರ ಕೈಗೊಳ್ಳುತ್ತೇವೆ ಎಂದರು.



