ಡಿವಿಜಿ ಸುದ್ದಿ, ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಸೂಚನೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ ಎಂದಿದ್ದಾರೆ.
ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಜು.20ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳು, ಘಟ್ಟ ಪ್ರದೇಶಗಳಲ್ಲಿ ವ್ಯಾಪಕ ಮಳೆ ಸಾಧ್ಯತೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಜು.21ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಬಹುದು’ ಎಂದು ಅವರು ತಿಳಿಸಿದರು.
ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ಗರಿಷ್ಠ 19 ಸೆಂ.ಮೀ ಮಳೆಯಾಗಿದೆ. ಭಾಗಮಂಡಲ, ಕೊಲ್ಲೂರು 13, ಕುಂದಾಪುರ, ಪುತ್ತೂರು, ಚಿಕ್ಕಮಗಳೂರು 9, ಉಪ್ಪಿನಂಗಡಿ, ಮೂಡಿಗೆರೆ 8, ಮಡಿಕೇರಿಯಲ್ಲಿ 7 ಸೆಂ.ಮೀ ಮಳೆಯಾಗಿದೆ



