ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಮುಂಗಾರಿ ಮಳೆಯ ಅಬ್ಬರಕ್ಕೆ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಹಾನಿ ಉಂಟಾಗಿದೆ. ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಉತ್ತರ ಕರ್ನಾಟ ಭಾಗದಲ್ಲಿ ವೈಮಾನಿಕ ಸಮೀಕ್ಷೆ ಕೈಗೊಳ್ಳಲಿದ್ದಾರೆ.
ಮಂಗಳವಾರ ಬೆಳಗ್ಗೆ 9 ಗಂಟೆಗೆ ಹೆಚ್‍ಎಎಲ್‍ನಿಂದ ಬೆಳಗಾವಿಗೆ ಸಿಎಂ ಪ್ರಯಾಣ ಬೆಳೆಸಲಿದ್ದು, ಬೆಳಗ್ಗೆ 10.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ, ಧಾರವಾಡ ಜಿಲ್ಲೆಗಳ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ಮಳೆ ಹಾನಿ ಸಂಬಂಧ ಸಭೆ ನಡೆಸಲಿದ್ದಾರೆ. ಬಳಿಕ 11.15ಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಲಿದ್ದಾರೆ.

ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ 1 ಗಂಟೆಗೆ ವಿಜಯಪುರ, ಬಾಗಲಕೋಟೆ, ಗದಗ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ಮಳೆ ಹಾನಿ ಸಂಬಂಧಿಸಿದಂತೆ ಸಭೆ ನಡೆಸಲಿದ್ದಾರೆ. ಮತ್ತೆ ಮಧ್ಯಾಹ್ನ 2.30ಕ್ಕೆ ವೈಮಾನಿಕ ಸಮೀಕ್ಷೆ ಕೈಗೊಳ್ಳಲಿದ್ದು, ಸಂಜೆ 5 ಗಂಟೆಗೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಕಂದಾಯ ಸಚಿವ ಆರ್.ಅಶೋಕ್ ಭಾಗಿಯಾಗಲಿದ್ದಾರೆ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಹುಲಗವಾಡಿ ಗ್ರಾಮದಲ್ಲಿ ಪ್ರವಾಹ ಹಿನ್ನೆಲೆ ಇಂದು ಸಹ ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿದ ಸಿಎಂ ಯಡಿಯೂರಪ್ಪ, ಗ್ರಾಮಸ್ಥರಿಗೆ ಓಡಾಡಲು ತಕ್ಷಣ ಬೋಟ್ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದಾರೆ.



