ಚೆನ್ನೈ: ಹಿರಿಯ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ಅವರ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡಿದೆ ಎಂದು ಎಸ್‍ಪಿಬಿ ಅವರ ಪುತ್ರ ಚರಣ್ ತಿಳಿಸಿದ್ದಾರೆ.
ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ ಬಗ್ಗೆಮಾಹಿತಿ ನೀಡಿದ ಚರಣ್, ನನ್ನ ತಂದೆಗಾಗಿ ನಿಮ್ಮ ನಿರಂತರ ಬೆಂಬಲ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದ. ತಂದೆ ಅವರ ಆರೋಗ್ಯ ಮತ್ತಷ್ಟು ಉತ್ತಮವಾಗಿದ್ದು, ಸ್ಥಿರವಾಗಿದೆ. ಅವರ ಕೊರೊನಾ ವರದಿಯೂ ನೆಗೆಟಿವ್ ಬಂದಿದ್ದು, ಈ ಕುರಿತ ಮಾಹಿತಿಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಕಳೆದ ಆಗಸ್ಟ್ 5ರಂದು ಎಸ್‍ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್‍ಬಿಪಿಗೆ ಚಿಕಿತ್ಸೆ ನೀಡಿದ್ದವು. ಕಳೆದ 19 ದಿನಗಳಿಂದ ಎಸ್‍ಪಿಬಿಯವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾ ವೈರಸ್‍ನಿಂದ ಶ್ವಾಸಕೋಶಗಳು ತೀವ್ರವಾಗಿ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ರಕ್ತಸ್ರಾವ ಹೆಚ್ಚಾಗಿದೆ. ಆದ್ದರಿಂದ ಎಕ್ಮೋ ಮೆಷಿನ್ ಅಳವಡಿಸಿ ಚಿಕಿತ್ಸೆ ಮಾಡಲಾಗುತ್ತಿದೆ ಎಂದು ವೈದ್ಯರು ಹೇಳಿದ್ದರು.

ಎಸ್‍ಪಿಬಿಯವರ ಬೇಗ ಗುಣಮುಖರಾಗಲಿ ಎಂದು ಇಡೀ ದೇಶಾದ್ಯಂತ ಅಭಿಮಾನಿಗಳು ಪ್ರಾರ್ಥನೆ ಮಾಡಿದ್ದಾರೆ. ಎಸ್‍ಪಿಬಿ ಸರ್ ಎಂದು ಟ್ಟಿಟ್ಟರ್ ನಲ್ಲಿ ಟ್ರೆಂಡ್ ಮಾಡಲಾಗಿತ್ತು. ಸೆಲೆಬ್ರಿಟಿಗಳು ಸೇರಿದಂತೆ ಎಸ್‍ಪಿಬಿಯವರ ಸಾವಿರಾರು ಅಭಿಮಾನಿಗಳು ಟ್ವೀಟ್ ಮಾಡಿ ದೇವರಲ್ಲಿ ಪ್ರಾರ್ಥನೆ ಮಾಡಿದ್ದರು.



