ಡಿವಿಜಿ ಸುದ್ದಿ, ಬೆಳಗಾವಿ: ಕೊರೊನಾದಿಂದ ಕುಸಿದಿದ್ದ ರಾಜ್ಯದ ಆರ್ಥಿಕತೆ ಮುಂದಿನ ಎರಡ್ಮೂರು ತಿಂಗಳಲ್ಲಿ ಸುಧಾರಿಸಲಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣ ಸಭಾಂಗಣದಲ್ಲಿ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಕಾರಣದಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಆದರೂ ಸರ್ಕಾರಿ ನೌಕರರಿಗೆ ವೇತನ ನೀಡಲಾಗಿದೆ. ಅಭಿವೃದ್ಧಿ ಕಾರ್ಯಕ್ಕೆ ತೊಡಕಿಲ್ಲ ಎಂದರು.
ಕಳೆದ ವರ್ಷ ಉಂಟಾಗಿದ್ದ ಪ್ರವಾಹ ಮತ್ತು ಅತಿವೃಷ್ಟಿಯಿಂದ ಹಾನಿಯಾಗಿರುವ ಮನೆಗಳ ನಿರ್ಮಾಣ ಪೂರ್ಣಗೊಳಿಸಲು ಕ್ರಮ ವಹಿಸಲಾಗಿದೆ. ಸಂತ್ರಸ್ತರಿಗೆ ಖಾತೆಗೆ ಪರಿಹಾರ ಬಿಡುಗಡೆ ಮಾಡಲಾಗುತ್ತಿದೆ. ಈ ವರ್ಷದ ಹಾನಿ ಸಮೀಕ್ಷೆ ನಡೆಯುತ್ತಿದ್ದು, ಸಮೀಕ್ಷಾ ವರದಿ ಸಿದ್ಧವಾದ ಬಳಿಕ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು. ಎನ್ ಡಿ ಆರ್ ಎಫ್ ಮಾರ್ಗಸೂಚಿ ಪ್ರಕಾರ ಬೆಳೆ ಹಾನಿ ಪರಿಹಾರ ಕೊಡಲಾಗುವುದು ಎಂದರು.

ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ಹಣ ದುರಪಯೋಗ ಆಗಬಾರದು. ಅರ್ಹ ರೈತರಿಗೆ ತ್ವರಿತವಾಗಿ ಪರಿಹಾರ ಕೊಡಬೇಕು.ಅತಿವೃಷ್ಟಿಯಿಂದಾಗಿ ರಸ್ತೆ, ಸೇತುವೆ, ಮನೆಗಳಿಗೆ ಹಾನಿಯಾಗಿದೆ. ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಹಾನಿಯ ಸಂಪೂರ್ಣ ವರದಿ ಸಿದ್ಧಪಡಿಸಲಾಗುವುದು ಎಂದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಆರೋಗ್ಯ ಭಾಗ್ಯ ಯೋಜನೆಗೆ ಪೊಲೀಸರನ್ನು ಸೇರಿಸಲಾಗಿದ್ದು, ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡದಿದ್ದರೆ ಕ್ರಮಕ್ಕೆ ಸೂಚಿಸಲಾಗಿದೆ. ಪೊಲೀಸರಿಗೆ ಆರೋಗ್ಯ ರಕ್ಷಣೆ ನೀಡಲು ಸರ್ಕಾರ ಬದ್ಧವಾಗಿದೆ ಎಂದರು.



