ಬೆಂಗಳೂರು: ಸರ್ಕಾರ್ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಸರ್ಕಾರದ ಆದೇಶವನ್ನು ನ.27ರೊಳಗೆ ಹಿಂತೆಗೆದುಕೊಳ್ಳದಿದ್ದರೆ ಡಿ.5ರಂದು ಅಖಿಲ ಕರ್ನಾಟಕ ಬಂದ್ಗೆ ಕರೆ ನೀಡುವುದಾಗಿ ಎಚ್ಚರಿಸಿವೆ.
ಪ್ರಾಧಿಕಾರ ರಚನೆ ವಿರೋಧಿಸಿ ಮೈಸೂರು ಬ್ಯಾಂಕ್ ವೃತ್ತದ ಬಳಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್,ಸಾ.ರಾ.ಗೋವಿಂದು, ಕೆ.ಆರ್.ಕುಮಾರ್, ಮಂಜುನಾಥ್ ದೇವು, ಗಿರೀಶ್ ಕುಮಾರ್, ಶಿವರಾಮೇಗೌಡ, ಪಾಲನೇತ್ರ, ಪ್ರವೀಣ್ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಕೂಡಲೇ ಆದೇಶ ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಡಿ.5ರಂದು ಬಂದ್ ಮಾಡುವುದಾಗಿ ಕರೆ ಕೊಟ್ಟರು.
ವಾಟಾಳ್ ನಾಗರಾಜ್ ಮಾತನಾಡಿ, ಸರ್ಕಾರ ಕೂಡಲೇ ಮರಾಠ ಪ್ರಾಧಿಕಾರ ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರು, ರೈತ ಮುಖಂಡರು, ಮಹಿಳಾ ಮುಖಂಡರೊಂದಿಗೆ ಸಭೆ ನಡೆಸಿ ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತೇವೆ.
ಸರ್ಕಾರಕ್ಕೆ ನ.27ರ ವರೆಗೆ ಗಡುವು ನೀಡುತ್ತೇವೆ. ಅಷ್ಟರೊಳಗೆ ಪ್ರಾಧಿಕಾರದಿಂದ ಹಿಂದೆ ಸರಿಯದಿದ್ದರೆ ಡಿ.5ರಂದು ರಾಜ್ಯ ಬಂದ್ ಮಾಡಿ ಕನ್ನಡಿಗರ ಸಾಮರ್ಥ್ಯ ಪ್ರದರ್ಶನ ಮಾಡಬೇಕಾಗುತ್ತದೆ ಎಂದು ಅವರು ಹೇಳಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ನಮ್ಮ ಸರ್ಕಾರ ಕೇವಲ 5 ಕೋಟಿ ಅನುದಾನ ನೀಡಿದೆ. ಆದರೆ, ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿದಿದರು.
ಮುಂದೆ ತಮಿಳು, ತೆಲುಗು, ಮಲಯಾಳಂ ಹೀಗೆ ಅನ್ಯ ರಾಜ್ಯಗಳ ಎಲ್ಲ ನಿವಾಸಿಗಳಿಗೂ ಅಭಿವೃದ್ಧಿ ಪ್ರಾಧಿಕಾರ ಮಾಡಿ ಕನ್ನಡಿಗರನ್ನು ಸರ್ಕಾರ ಅನಾಥರನ್ನಾಗಿ ಮಾಡಲು ಹೊರಟಿದೆ ಎಂದು ಗಂಭೀರ ಆರೋಪ ಮಾಡಿದರು.
ಸಾ.ರಾ.ಗೋವಿಂದು ಮಾತನಾಡಿ, ಗೋವಾದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯವಾಗುತ್ತಿದೆ. ಬೆಳಗಾವಿಯಲ್ಲಿ ಕನ್ನಡಿಗರಿಗೆ ರಕ್ಷಣೆ ಇಲ್ಲ. ಅವರ ಹಿತ ಕಾಯುವುದು ಬಿಟ್ಟು ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು ಹಾಸ್ಯಾಸ್ಪದವಾಗಿದೆ. ಕೂಡಲೇ ಈ ಕ್ರಮದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.