ಬೆಂಗಳೂರು: ತಮಿಳುನಾಡಿನ ಕೆಲ ಭಾಗಗಳಲ್ಲಿ ‘ನಿವಾರ್’ ಚಂಡಮಾರುತ ಅಪ್ಪಳಿಸಲಿದ್ದು, ಮುಂದಿನ 2 ದಿನ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಪರಿಣಾಮ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನ.24 ಮತ್ತು 25ರಂದು ಸಾಧಾರಣ ಮಳೆಯಾಗಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರಿನಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ತಮಿಳುನಾಡು, ಆಂಧ್ರಪ್ರದೇಶ ಹಾಗೂ ಪುದುಚೇರಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಂಕಷ್ಟ ನಿವಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮಿಳುನಾಡು ಮತ್ತು ಪುದುಚೇರಿ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದು, ಸಂಪೂರ್ಣ ಸಹಾಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.ನಿವಾರ್ ಚಂಡಮಾರುತವು ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗುತ್ತಿದ್ದು, ಪರಿಣಾಮ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದ ಅನೇಕ ಕಡೆ ಭಾರಿ ಮಳೆ ಯಾಗಲಿದೆ.