ಮೈಸೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೋಲನ್ನುಮೆಲುಕು ಹಾಕಿದ ಬೆನ್ನಲ್ಲೇ, ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ತಮ್ಮ ಸೋಲಿಗೆ ಬಿಜೆಪಿ, ಜೆಡಿಎಸ್ ಮಾತ್ರವಲ್ಲದೆ ಕಾಂಗ್ರೆಸ್ಸಿಗರೂ ಕಾರಣ ಎಂದಿದ್ದರು. ಇದಕ್ಕೆ ಪ್ರತಿ ಸ್ಪರ್ಧಿ ಜೆಡಿಎಸ್ ನ ಜಿ.ಟಿ. ದೇವೇಗೌಡ ಪ್ರತಿಕ್ರಿಯಿಸಿದ್ದಾರೆ.
ಸಿದ್ದರಾಮಯ್ಯ ಅವರು ಮನಸ್ಸಿನ ನೋವನ್ನು ಹೇಳಿಕೊಂಡಿದ್ದಾರೆ. ಈ ಮೊದಲು ವರುಣ, ಚಾಮುಂಡೇಶ್ವರಿ ಒಂದೇ ಕ್ಷೇತ್ರವಾಗಿತ್ತು. ತಾಲೂಕು ಬೋರ್ಡ್ ಸದಸ್ಯನಿಂದ ಹಿಡಿದು ಉಪ ಮುಖ್ಯಮಂತ್ರಿ ಆಗುವವರೆಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಅವರು ಇದ್ದರು. ವರುಣ ಕ್ಷೇತ್ರ ಉದಯವಾದ ನಂತರ ಅಲ್ಲಿಗೆ ಹೋಗಿ ಗೆದ್ದು ಮುಖ್ಯಮಂತ್ರಿಯಾದರು.ವರುಣಾದಿಂದ ಗೆದ್ದರೂ ಸಹ ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿ ಆಗಬೇಕೆಂದು ಸಿದ್ದರಾಮಯ್ಯ ಬಯಸಿದ್ದರು. ಆದರೆ, ಜನ ಅವರನ್ನು ಕೈ ಹಿಡಿಯಲಿಲ್ಲ. ನೀವೇ ನನ್ನನ್ನು ಕೈ ಬಿಟ್ಟಿರಿ ಎಂದು ಕಾರ್ಯಕರ್ತರ ಬಳಿ ನೋವನ್ನು ಹೇಳಿಕೊಂಡಿದ್ದಾರೆ ಎಂದು ದೇವೇಗೌಡರು ಪ್ರತಿಕ್ರಿಯಿಸಿದರು.
ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ 2013ರ ಚುನಾವಣೆಯಲ್ಲಿ 8 ಸಾವಿರ ಮತಗಳನ್ನು ಪಡೆದಿತ್ತು. ಆಗ ಹೇಮಂತ್ ಕುಮಾರ್ ಗೌಡ ಅಭ್ಯರ್ಥಿಯಾಗಿದ್ದರು. 2018ರ ಚುನಾವಣೆಯಲ್ಲಿ ಗೋಪಾಲ್ ರಾವ್ ಅಭ್ಯರ್ಥಿಯಾಗಿದ್ದರು. ಬಿಜೆಪಿ15 ಸಾವಿರ ಮತ ಪಡೆಯಿತು. ನಾನು ಸ್ಪರ್ಧಿಸಿದ್ದ ಚುನಾವಣೆಯಲ್ಲಿ ಬಿಜೆಪಿ ಡಬಲ್ ಓಟ್ ಪಡೆದುಕೊಂಡಿದೆ” ಎಂದು ಹೇಳಿದ ಜಿ. ಟಿ. ದೇವೇಗೌಡರು ಒಳ ಒಪ್ಪಂದದ ಸುದ್ದಿ ಸುಳ್ಳು ಎಂದರು.
ಮೈತ್ರಿ ಸರ್ಕಾರ ಪತನಕ್ಕೆ ಕುಮಾರಸ್ವಾಮಿ, ಸಿದ್ದರಾಮಯ್ಯ ಇಬ್ಬರೂ ಕಾರಣ. ಸರ್ಕಾರ ಬೀಳುತ್ತೇ ಅಂತ ಗೊತ್ತಿತ್ತು. ಗೊತ್ತಿದ್ದರೂ ಕುಮಾರಸ್ವಾಮಿ ಅಮೆರಿಕಾಕ್ಕೆ ಹೋಗಿ ಕುಳಿತುಕೊಂಡರು. ಶಾಸಕರು ಪಕ್ಷ ಬಿಟ್ಟು ಹೋಗುತ್ತಾರೆ ಅಂತ ಸಿದ್ದರಾಮಯ್ಯ ಅವರಿಗೂ ಗೊತ್ತಿತ್ತು. ಮನಸ್ಸು ಮಾಡಿದ್ದರೆ ಅದನ್ನು ಸಿದ್ದರಾಮಯ್ಯ ತಡೆಯಬಹುದಿತ್ತು. ಶಾಸಕರು ಪಕ್ಷ ಬಿಡದಂತೆ ತಡೆಯುವ ಪ್ರಯತ್ನವನ್ನು ಸಿದ್ದರಾಮಯ್ಯ ಮಾಡಲಿಲ್ಲ ಎಂದುತ ತಿಳಿಸಿದರು.