ಚೆನ್ನೈ: ತಮಿಳುನಾಡಿನ ವಿರುಧುನಗರದ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 11 ಮಂದಿ ಸಜೀವ ದಹನವಾಗಿದ್ದು, 36 ಮಂದಿ ಗಾಯಗೊಂಡಿದ್ದಾರೆ.
ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ಕಾರ್ಖಾನೆ ತುಂಬೆಲ್ಲ ಬೆಂಕಿ ಆವರಿಸಿಕೊಂಡಿದೆ.ಮೃತಪಟ್ಟ 11 ಜನರ ಪೈಕಿ 9 ಮೃತ ದೇಹಗಳನ್ನು ಹೊರತೆಗೆಯಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಮೃತ ದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಗುರುತು ಪತ್ತೆ ಮಾಡಲಾಗದ ಸ್ಥಿತಿಯಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರಿಗೆ 2ಲಕ್ಷ ರೂ. ಮತ್ತು ಗಾಯಾಳುಗಳಿಗೆ 50,000ರೂ. ಪರಿಹಾರವನ್ನು ಪ್ರಧಾನಿ ಮೋದಿ ಪ್ರಕಟಿಸಿ, ಸಂತಾಪ ಸೂಚಿಸಿದ್ದಾರೆ. ತಮಿಳುನಾಡು ಸರಕಾರವು ಮೃತರಿಗೆ 3ಲಕ್ಷ ರೂ. ಹಾಗೂ ಗಾಯಾಳುಗಳಿಗೆ 1 ಲಕ್ಷ ರೂ. ಪರಿಹಾರ ಘೋಷಿಸಿದೆ.
ಇಂದು ಮಧ್ಯಾಹ್ನ 1.30 ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಪಟಾಕಿ ತಯಾರಿಸಲು ಕೆಲವು ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಕಾರ್ಖಾನೆಯಲ್ಲಿನ ಬೆಂಕಿಯನ್ನು ನಂದಿಸಲು ವಿವಿಧ ಸ್ಥಳಗಳಿಂದ ಹತ್ತು ಅಗ್ನಿಶಾಮಕ ಘಟಕಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ.