ಬೆಂಗಳೂರು: ಶಿಕ್ಷಣ ಇಲಾಖೆಯ ದ್ವಂದ್ವ ನಿಲುವು, ಅವೈಜ್ಞಾನಿಕ ಕ್ರಮ ಖಂಡಿಸಿ ಇದೇ 23ರಂದು ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಸಂಘಟನೆಯ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಹೇಳಿದದ್ಧಾರೆ.
ಅಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಲಿದೆ. ರಾಜ್ಯದಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ, ಶಿಕ್ಷಕರು, ವ್ಯವಸ್ಥಾಪಕರು ಸೇರಿ 25 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕ್ಯಾಮ್ಸ್ ಮತ್ತು ಇತರ 10 ರಾಜ್ಯ ಸಂಘಟನೆಗಳನ್ನು ಒಳಗೊಂಡ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿಗಳು, ಶಿಕ್ಷಣ- ಶಿಕ್ಷಕೇತರ ಸಿಬ್ಬಂದಿಯ ಸಮನ್ವಯ ಸಮಿತಿಯ ಅಡಿಯಲ್ಲಿ ಈ ರ್ಯಾಲಿ ಮತ್ತು ಪ್ರತಿಭಟನಾ ಸಮಾವೇಶ ನಡೆಯಲಿದೆ. ಸಂಜೆ 4 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದೆ ಎಂದರು.
ಸರ್ಕಾರದ ನಿಯಮಗಳು ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದೆ. ಒಂದೆಡ ಶುಲ್ಕ ಕಡಿತ, ಇನ್ನೊಂದೆಡೆ ಹಳೆಯ ಶಾಲೆಗಳಿಗೂ ಹೊಸ ಶಾಲೆಗಳ ನಿಯಮ ಹೇರಿ ನವೀಕರಣದ ಹೆಸರಿನಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿ ಕೊಡಲಾಗಿದೆ. ಸರ್ಕಾರ ಸಹಕಾರ ಕೊಡದೇ ಇರುವುದರಿಂದ ಶಿಕ್ಷಕರು ಮತ್ತು ಶಿಕ್ಷಕರೇತರ ಸಿಬ್ಬಂದಿ ಕಷ್ಟಕ್ಕೆ ಸಿಲುಕಿದ್ದಾರೆ. ಶಿಕ್ಷಣ ಸಚಿವರು ಮತ್ತು ಶಿಕ್ಷಣ ಇಲಾಖೆ ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಇದರ ವಿರುದ್ಧ ಪ್ರತಿಭಟನೆ ನಡೆಯಲಿದೆ ಎಂದರು.