ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮತ್ತೆ ಮೂರು ಪ್ರತಿಭಟನೆ ನಡೆಯುತ್ತಿವೆ. ಒಂದೆಡೆ ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರೆ ಇನ್ನೊಂದೆಡೆ ಸಾರಿಗೆ ನೌಕರರು ಮತ್ತೆ ಸತ್ಯಾಗ್ರಹ ಆರಂಭಿಸಿದ್ದಾರೆ. ಬೆಲೆ ಏರಿಕೆ ನೀತಿ ಖಂಡಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಸಹ ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
ಸೇವಾ ಹಿರಿತನದ ಆಧಾರದ ಮೇಲೆ ಗೌರವ ಧನ ಹೆಚ್ಚಳ, ಎಲ್ ಕೆ ಜಿ, ಯುಕೆಜಿ ಅಂಗನವಾಡಿಯಲ್ಲೇ ಆರಂಭಿಸಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದು, ರಾಜ್ಯದ ವಿವಿಧ ಭಾಗದಿಂದ ಆಗಮಿಸಿರುವ 5 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಸಾರಿಗೆ ನೌಕರರಿಗೆ 6ನೇ ವೇತನ ಆಯೋಗ ಜಾರಿಮಾಡಿ ಬಜೆಟ್ ನಲ್ಲಿ ಘೋಷಿಸಬೇಕು. ಈ ಹಿಂದೆ ಸರ್ಕಾರ ನೀಡಿದ್ದ ಭರವಸೆಯನ್ನು ಈಡೇರಿಸುವಂತೆ ಆಗ್ರಹಿಸಿದ್ದಾರೆ. ಸಾರಿಗೆ ನೌಕರರು ಮೌರ್ಯ ವೃತ್ತದಲ್ಲಿ ಒಂದು ದಿನದ ಪ್ರತಿಭಟನೆ ನಡೆಸುತ್ತಿದ್ದಾರೆ. ನಾಲ್ಕು ನಿಗಮದ ಸಾರಿಗೆ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಇನ್ನು ಅಡುಗೆ ಅನಿಲದರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ತರಕಾರಿ ಹಾರ ಹಾಕಿಕೊಂಡು, ತಲೆಯ ಮೇಲೆ ಅಣುಕು ಸಿಲಿಂಡರ್ ಹೊತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮೂರು ಪ್ರತಿಭಟನೆಯಿಂದ ರಾಜಧಾನಿಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ.



