ಬೆಂಗಳೂರು: ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಳ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಿಂದ ಸಂಜೆ 6.30ಕ್ಕೆ ಪ್ರಧಾನಿಗಳ ವಿಡಿಯೋ ಸಂವಾದದಲ್ಲಿ ನಡೆಯಲಿದೆ.
ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ಹೆಚ್ಚಾಗುತ್ತಿದ್ದು, ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಮೋದಿ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಪಕ್ಷದ ರಾಜ್ಯಗಳಲ್ಲಿ ಕೊರೊನಾ ಸೋಂಕು ತೀವ್ರತರವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿಯಲ್ಲಿ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ, ಕೋವಿಡ್ ತಪಾಸಣೆ ಹೆಚ್ಚಳ, ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಕ್ರಮದ ಕುರಿತು ಚರ್ಚೆ ನಡೆಸಲಾಗುತ್ತದೆ.
ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಕೇರ್ ಸೆಂಟರ್‍ಗಳ ವ್ಯವಸ್ಥೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ, ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಬೆಡ್ ಕಾಯ್ದಿರಿಸುವಿಕೆ, ಐಸಿಯು ಬೆಡ್ ವ್ಯವಸ್ಥೆ, ಆಕ್ಸಿಜನ್ ದಾಸ್ತಾನು ಕುರಿತು ಸಿಎಂ ಯಡಿಯೂರಪ್ಪ ಜತೆ ಪಿಎಂ ಮೋದಿ ವಿಸ್ತೃತ ಚರ್ಚೆ ನಡೆಸಲಿದ್ದಾರೆ.