ಬೆಂಗಳೂರು: ನೈಋತ್ಯ ಚಂಡಮಾರುತ ಅಬ್ಬರದಿಂದ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಏ.14ರವರೆಗೆ ರಾಜ್ಯಾದ್ಯಂತ ಮಳೆಯಾಗಲಿದ್ದು, 3 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದಲ್ಲಿಯೂ ಗುಡುಗು ಸಹಿತ ಮಳೆಯಾಗಿದೆ. ನೈಋತ್ಯ ಚಂಡಮಾರುತದ ಅಬ್ಬರದಿಂದ ದಕ್ಷಿಣ ಭಾರತದ ಹಲವೆಡೆ ಇಂದಿನಿಂದ 3 ದಿನ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದಿನಿಂದ ಏ. 14ರವರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೀದರ್, ಬೆಳಗಾವಿ, ಧಾರವಾಡ, ವಿಜಯಪುರ, ಯಾದಗಿರಿ, ಕಲಬುರ್ಗಿಯಲ್ಲೂ ಇಂದಿನಿಂದ ಮಳೆ ಚುರುಕುಗೊಳ್ಳಲಿದೆ. ಶಿವಮೊಗ್ಗ, ಕೊಡಗಿನಲ್ಲೂ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ.
ಮಲೆನಾಡು, ಕರಾವಳಿಯಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದ್ದು, ಬಾಗಲಕೋಟೆ, ಹುಬ್ಬಳ್ಳಿ, ಯಲ್ಲಾಪುರ, ಶಿರಸಿ, ರಿಪ್ಪನ್ಪೇಟೆ, ಹೊಸನಗರ, ತೀರ್ಥಹಳ್ಳಿ, ಸಾಗರ, ಭದ್ರಾವತಿ, ಬಾಳೆ ಹೊನ್ನೂರಿನಲ್ಲಿ ಮಳೆಯಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಲ್ಲಿ ಮಳೆಯಾಗಲಿದೆ.
ಉತ್ತರ ಕರ್ನಾಟಕದ ಬಾಗಲಕೋಟೆ, ಹುಬ್ಬಳ್ಳಿ, ವಿಜಯಪುರದಲ್ಲಿ ಭಾರೀ ಮಳೆಯಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆ, ಕಳಸ ಸುತ್ತಮುತ್ತ ನಿನ್ನೆ ಮಳೆಯಾಗಿದ್ದು, ಇಂದು ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.



