ಬೆಂಗಳೂರ: ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಇಂದು ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದರು. ಈ ವೇಳೆ ಪೊಲೀಸರು ಸಾರಿಗೆ ನೌಕರ ಒಕ್ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿದ್ದಾರೆ.
ಪ್ರತಿಭಟನೆ ವೇಳೆ ಸರ್ಕಾರಿ ಬಸ್ ಗಳ ಮೇಲೆ ಕಲ್ಲು ತೂರಾಟ ಹಿನ್ನೆಲೆಯಲ್ಲಿ ಗಾಂಧಿನಗರದ ಕೋಡಿಹಳ್ಳಿ ಚಂದ್ರಶೇಖರ್ ಕಚೇರಿಯಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ 15 ಕ್ಕೂ ಹೆಚ್ಚು ಜನರನ್ನು ಪೊಲೀಸರು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಮುಷ್ಕರ ಇಂದು 13 ನೇ ದಿನಕ್ಕೆ ಕಾಲಿಟ್ಟಿದೆ. ಬಸ್ ಇಲ್ಲದೇ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂದು ಮಧ್ಯಾಹ್ನ 12 ಗಂಟೆಯ ವೇಳೆಗೆ ರಾಜ್ಯಾಧ್ಯಂತ 4,480 ಬಸ್ ಗಳು ಸಂಚಾರ ಆರಂಭಿಸಿವೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಹಿತಿ ನೀಡಿದೆ. KSRTC 2174 ಬಸ್, BMTC 755 ಬಸ್, NEKRTC 813 ಬಸ್, NWKRTC 738 ಬಸ್ ಸೇರಿದಂತೆ ಒಟ್ಟು 4,480 ಸಾರಿಗೆ ಬಸ್ ಗಳು ಸಂಚಾರ ಆರಂಭಿಸಿವೆ.



