ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆ ಮುಂದೂಡುವಂತೆ ಸರ್ಕಾರ ಚುನಾವಣೆ ಆಯೋಗಕ್ಕೆ ಮನವಿ ಸಲ್ಲಿಸಲು ನಿರ್ಧರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರ ನಿರ್ಧಾರವನ್ನು ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು. ಅವಧಿ ಮುಗಿದಿರುವ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ನಿಯೋಜಿಸಲು ಚಿಂತನೆ ನಡೆದಿದೆ ಎಂದರು.
ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ನಮ್ಮ ನಿರೀಕ್ಷೆಗೂ ಮೀರಿ ಹೆಚ್ಚಾಗುತ್ತಿದೆ. ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಸುಮಾರು 3.5 ಕೋಟಿ ಗ್ರಾಮೀಣ ಭಾಗದ ಮತದಾರರು ಭಾಗವಹಿಸಲಿದ್ದಾರೆ. ಇದರಿಂದ ಸೋಂಕು ಒಬ್ಬರಿಂದ ಒಬ್ಬರಿಗೆ ಹಬ್ಬುವ ಸಾಧ್ಯತೆ ಇರುವುದರಿಂದ ಚುನಾವಣೆ ನಡೆಸುವುದು ಸರಿಯಲ್ಲ ಎಂಬ ಅಭಿಪ್ರಾಯ ಕೇಳಿಬಂದಿದೆ. ತಾತ್ಕಾಲಿಕವಾಗಿ ಮುಂದೂಡಲು ಆಯೋಗಕ್ಕೆ ಮನವಿ ಮಾಡುತ್ತೇವೆ . ಗ್ರಾಮ ಪಂಚಾಯ್ತಿ ಚುನಾವಣೆ ನಡೆಯುವ ಸಂದರ್ಭದಲ್ಲಿ ಇಷ್ಟು ಪ್ರಮಾಣದಲ್ಲಿ ಕೋವಿಡ್ ಸೋಂಕು ಹರಡುತ್ತಿರಲಿಲ್ಲ. ಈಗ ಪರಿಸ್ಥಿತಿ ಗಂಭೀರವಾಗಿದೆ ಎಂದಿದ್ದಾರೆ.



