ಬೆಂಗಳೂರು: ಕೊರೊನಾ ಸಂಕಷ್ಟದಲ್ಲಿ ಮುಷ್ಕರ ನಡೆಸುವುದು ಸರಿಯಲ್ಲ. ಕೂಡಲೇ ಸೇವೆ ಆರಂಭಿಸುವಂತೆ ಮುಷ್ಕರ ನಿರತ ಸಾರಿಗೆ ನೌಕರರಿಗೆ ಹೈ ಕೋರ್ಟ್ ಸೂಚಿಸಿದೆ.
ಸಾರಿಗೆ ನೌಕರರ ಮುಷ್ಕರ ತಡೆಯಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಇಂದು ವಿಚಾರಣೆ ನಡೆಸಿತು ಈ ಸೂಚನೆ ನೀಡಿದೆ.
ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿ, ಮುಷ್ಕರ ನಿರತರ ವಿರುದ್ಧ ಎಸ್ಮಾ ಜಾರಿಗೊಳಿಸಲಾಗಿದೆ. ಸಾರಿಗೆ ನೌಕರರ ಮುಷ್ಕರವನ್ನು ಕಾನೂನು ಬಾಹಿರ ಎಂದು ಘೋಷಿಸಲಾಗಿದ್ದು, ಕಾರ್ಮಿಕ ನ್ಯಾಯಾಲಯದಲ್ಲಿ ಈ ಸಂಬಂಧ ದಾವೆ ಹೂಡಲಾಗಿದೆ. ನೌಕರರ ಕೆಲ ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ. ಆದರೆ, ಅವರನ್ನು ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕೆಂಬ ಬೇಡಿಕೆ ಪರಿಗಣಿಸುವುದು ಸಾಧ್ಯವಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಮುಷ್ಕರದಿಂದ ಜನಸಾಮಾನ್ಯರ ಮೂಲಭೂತ ಹಕ್ಕಿಗೆ ದಕ್ಕೆಯಾಗಲಿದೆ ಎಂದು ಅಭಿಪ್ರಾಯಪಟ್ಟ ಕೋರ್ಟ್, ಮುಷ್ಕರ ನಿರತ ನೌಕರರು ತಮ್ಮ ಬೇಡಿಕೆ ಕಾಯ್ದಿರಿಸಿ ತಕ್ಷಣ ಸೇವೆ ಆರಂಭಿಸಬೇಕು ಎಂದು ಸೂಚಿಸಿತು. ಈ ಸಂಬಂಧ ಕೆಎಸ್ಆರ್ಟಿಸಿ, ಎನ್ಇಕೆಆರ್ಟಿಸಿ, ಎನ್ಡಬ್ಲ್ಯುಕೆಆರ್ಟಿಸಿ, ಬಿಎಂಟಿಸಿ ಹಾಗೂ ಕರ್ನಾಟಕ ರಾಜ್ಯ ಸಾರಿಗೆ ನೌಕರರ ಕೂಟಕ್ಕೆ ನೋಟಿಸ್ ಜಾರಿಗೊಳಿಸಿದ ಕೋರ್ಟ್, ಏ.22ರ ಬೆಳಗ್ಗೆ 11.40ಕ್ಕೆ ವಿಚಾರಣೆ ನಿಗದಿಪಡಿಸಿದೆ.



