ದಾವಣಗೆರೆ: ಶಿಷ್ಯ ವೇತನ ಬಿಡುಗಡೆಗೆ ಆಗ್ರಹಿಸಿ ಜೆಜೆಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇಂದು ಪಿಪಿಇ ಕಿಟ್ ಧರಿಸಿ ಟೀ ಮಾರಾಟ ಮಾಡಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಜೆಜೆಎಂ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿಗಳಿಗೆ ಕಳೆದ ಐದು ತಿಂಗಳಿಂದ ಶಿಷ್ಯವೇತನ ಬಿಡುಗಡೆಯಾಗಿಲ್ಲ. ಶಿಷ್ಯ ವೇತನ ಬಿಡುಗಡೆಗೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಮುಷ್ಕರ ನಡೆಸುತ್ತಿದ್ಧಾರೆ. ಇಂದು ನಗರದ ಜಯದೇವ ವೃತ್ತದಲ್ಲಿ ಪಿಪಿಇ ಕಿಟ್ ಧರಿಸಿ, ಟೀ ಮಾರಾಟ ಮಾಡಿ ತಮ್ಮ ಆಕ್ರೋಶ ಹೊರ ಹಾಕಿದರು.

ಶಿಷ್ಯ ವೇತನಕ್ಕೆ ಆಗ್ರಹಿಸಿ ಆಡಳಿತ ಮಂಡಳಿ ಹಾಗೂ ಸರ್ಕಾರಕ್ಕೆ ಮನವಿ ಮಾಡಿದ್ದರೂ ಪ್ರಯೋಜನ ಆಗಿಲ್ಲ. ಇದರಿಂದ ಬೇಸತ್ತು ಈಗ ಹೋರಾಟದ ಹಾದಿ ತುಳಿಯುವಂತಾಗಿದೆ. ಕೋವಿಡ್ ವಿರುದ್ಧದ ಕೆಲಸ ಮಾಡುವ ವೈದ್ಯರಿಗೆ ಸಕಾಲಕ್ಕೆ ವೇತನ ಪಾವತಿ ಮಾಡುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಕೋರ್ಟ್ ನಿರ್ದೇಶನ ನೀಡಿದೆ. ಆದರೂ ಕಳೆದ ಐದು ತಿಂಗಳಿನಿಂದ ವೇತನ ಪಾವತಿಸಿಲ್ಲ ಎಂದು ಕಿಡಿಕಾರಿದ್ದಾರೆ.
ಸರ್ಕಾರಿ ಕೋಟಾದಡಿ ಆಯ್ಕೆಯಾಗಿರುವ ಜೆಜೆಎಂ ವಿದ್ಯಾರ್ಥಿಗಳು ನಗರದ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹಲವು ವರ್ಷಗಳಿಂದ ರಾಜ್ಯ ಸರ್ಕಾರವೇ ಶಿಷ್ಯವೇತನ ನೀಡುತಿತ್ತು. ಆದ್ರೆ ಕಳೆದ ಐದು ತಿಂಗಳಿನಿಂದ ಶಿಷ್ಯವೇತನ ಬಿಡುಗಡೆ ಮಾಡಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ಧಾರೆ.



