ದಾವಣಗೆರೆ: ಸಹೋದರರ ಹೆಸರಿನಲ್ಲಿ ಅಕ್ರಮವಾಗಿ ನಿವೇಶನ (ಸೈಟ್) ಪಡೆದ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ (ಧೂಡಾ) ಅಧ್ಯಕ್ಷ ದೇವರಮನಿ ಶಿವಕುಮಾರ್ 10 ದಿನದೊಳಗೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಧೂಡಾ, ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಸಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವರಮನಿ ಶಿವಕುಮಾರ್ ಮತ್ತು ಸಹೋದರರು ಜೆ. ಹೆಚ್. ಪಟೇಲ್ ಬಡಾವಣೆಯಲ್ಲಿ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ. ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. 2017 ರಲ್ಲಿ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಸಚಿವರಾಗಿದ್ದಾಗ 103 ಮಂದಿಗೆ ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಲಾಗಿದೆ. ಕಾಂಗ್ರೆಸ್ ಮುಖಂಡರು, ಅವರ ಆಪ್ತರು, ಆಗ ಕಾಂಗ್ರೆಸ್ ನಲ್ಲಿದ್ದ ಈಗ ಧೂಡಾ ಅಧ್ಯಕ್ಷರಾಗಿರುವ ದೇವರಮನಿ ಶಿವಕುಮಾರ್ ಸೇರಿದಂತೆ ಹಲವರಿಗೆ ನೀಡಲಾಗಿದೆ ಎಂದು ಆರೋಪಿಸಿದರು.
20 ಸಾವಿರ ಅರ್ಜಿಗಳು ಬಂದಿದ್ದರೂ ಕಾನೂನು ಪಾಲಿಸದೇ ನಿವೇಶನ ಹಂಚಿಕೆ ಮಾಡಲಾಗಿದೆ. ಬಡವರಿಗೆ ಹಂಚಿಕೆ ಮಾಡದೇ ರಾಜಕೀಯ ನಾಯಕರಿಗೆ ಹಂಚಿಕೆ ಮಾಡಲಾಗಿದೆ. ಈ ಬಗ್ಗೆ ಜನಪ್ರತಿನಿಧಿ ನ್ಯಾಯಾಲಯಕ್ಕೆ ದೂರು ಸಲ್ಲಿಸಲಾಗುವುದು ಎಂದರು. ಇನ್ನು ದೇವರಮನಿ ಭ್ರಷ್ಟಾಚಾರ ಮಾಡಿದ್ದರೂ, ದೂಡಾ ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದರು.



