ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಯುಪಿಎಸ್‌ಸಿ, ಕೆಎಎಸ್, ಗ್ರೂಪ್-ಸಿ, ಎಸ್‌ಎಸ್‌ಸಿ, ಬ್ಯಾಂಕಿಗ್, ಆರ್‌ಆರ್‌ಬಿ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಬಯಸುವವರಿಗೆ ತರಬೇತಿ ನೀಡುವ ಸಲುವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅ. 31 ರಂದು 07 ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಯಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರ ನಡೆಯದಂತೆ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದ ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪ್ರವೇಶ ಪರೀಕ್ಷೆ ಸಂಬಂಧ ಏರ್ಪಡಿಸಲಾಗಿದ್ದ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಅ.31 ರಂದು ಜರುಗಲಿರುವ ಪ್ರವೇಶ ಪರೀಕ್ಷೆಗಳಲ್ಲಿ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು ಆದೇಶ ಹೊರಡಿಸಲಾಗಿದೆ. ನಗರದಲ್ಲಿ ಒಟ್ಟು 07 ಪರೀಕ್ಷಾ ಕೇಂದ್ರಗಳಿದ್ದು, 3072 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಯು ಅ. 31 ರಂದು ಬೆಳಿಗ್ಗೆ 10.30 ರಿಂದ 12.30 ಮತ್ತು ಮಧ್ಯಾಹ್ನ 2.30 ರಿಂದ 4.30 ರವರೆಗೆ ನಡೆಯಲಿವೆ ಎಂದರು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕೆಂದು ಘೋಷಿಸಿರುವುದರಿಂದ ಪರೀಕ್ಷಾ ಕೇಂದ್ರಗಳಿಗೆ ನೇಮಿಸಿರುವ ವಿಚಕ್ಷಣಾ ಅಧಿಕಾರಿಗಳು, ಕೇಂದ್ರಗಳನ್ನು ಪರಿಶೀಲಿಸಬೇಕು ಹಾಗೂ ಕೋವಿಡ್ ಗುಣಲಕ್ಷಣಗಳು ಕಂಡು ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷಾ ಕೊಠಡಿಗಳ ವ್ಯವಸ್ಥೆ ಮಾಡಬೇಕು ಎಂದು ಎಲ್ಲಾ ಕಾಲೇಜಿನ ಪ್ರಾಂಶುಪಾಲರಿಗೆ ಸೂಚನೆ ನೀಡಿದರು.
ಈ ವೇಳೆಯಲ್ಲಿ ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ರೇಷ್ಮ ಕೌಸರ್, ಡಿಡಿಪಿಯು ಶಿವರಾಜ್, ಬಿಇಒ ಮತ್ತು ಬಿಎಸ್‌ಡಬ್ಲೂö್ಯ ಅಧಿಕಾರಿಗಳು, ದೂಡಾ ಅಧಿಕಾರಿಗಳು, ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ನೇಮಿಸಿರುವ ಕಾಲೇಜಿನ ಮುಖ್ಯಸ್ಥರು ಉಪಸ್ಥಿತರಿದ್ದರು..



