ಬೆಂಗಳೂರು: ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಬೆಳಗಾವಿ, ಉತ್ತರ ಕನ್ನಡ, ವಿಜಯಪುರ, ಗದಗ, ಧಾರವಾಡ ಸೇರಿದಂತೆ 7 ಜಿಲ್ಲೆಗಳಿಗೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಂಘ ಹಾಗೂ ಧಾರವಾಡ-ಹಾವೇರಿ ಹಾಲು ಉತ್ಪಾದಕರ ಸಂಘಗಳನ್ನು ಪ್ರತ್ಯೇಕಿಸಲು ಸಂಪುಟದಲ್ಲಿ ಒಪ್ಪಿಗೆ ದೊರೆತಿದೆ ಎಂದರು.
ನೇಕಾರ ಸಮುದಾಯಕ್ಕೆ 376 ಕೋಟಿ ವಿಶೇಷ ಪ್ಯಾಕೇಜ್ ನೀಡಲು ತೀರ್ಮಾನಿಸಲಾಗಿದೆ. ಹೊಸಪೇಟೆ-ಬಳ್ಳಾರಿ ರಸ್ತೆ ಕಾಮಗಾರಿಗೆ ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ. ನೂತನ ಮರಳು ನೀತಿ ಜಾರಿಗೆ ತಂದು ಶೇ.25ರಷ್ಟು ಗ್ರಾಮ ಪಂಚಾಯಿತಿಗೆ ಅನುಮತಿ, ದಕ್ಷಿಣ ಕನ್ನಡದಲ್ಲಿ ಸಾಂಪ್ರದಾಯಿಕ ಮರಳು ತೆಗೆಯಲು ಅವಕಾಶ ನೀಡಲಾಗಿದೆ. ಈ ಬಾರಿ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿದ್ದು, ಅಧಿವೇಶನದ ದಿನಾಂಕವನ್ನು ಮುಂದಿನ ಸಂಪುಟ ಸಭೆಯಲ್ಲಿ ತಿಳಿಸಲಾಗುವುದು ಎಂದರು.