ದಾವಣಗೆರೆ: ಸಂಸದ ಜಿ.ಎಂ ಸಿದ್ದೇಶ್ವರ ಮಾಲೀಕತ್ವದ ಕಂಪನಿಯಿಂದ ಹಾವೇರಿ ಜಿಲ್ಲೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಸಂಸದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ಎಸ್ .ಆರ್ .ಹಿರೇಮಠ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಹಾವೇರಿ ಜಿಲ್ಲೆಯ ರಟ್ಟೀಹಳ್ಳ ತಾಲೂಕು ಚಟ್ನಿಹಳ್ಳಿ ಹಾಗೂ ಇತರ ಗ್ರಾಮಗಳಲ್ಲಿ ಜಿ.ಎಂ.ಶುಗರ್ಸ್ ಕಂಪನಿಯಿಂದ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸಲಾಗುತ್ತಿದ್ದು, ಕಂಪನಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಹಾಗೂ ಕಂಪನಿಯ ಮಾಲೀಕರಾದ ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಅಕ್ರಮ ಗಣಿಗಾರಿಕೆ ಆಧಾರದ ಹಿನ್ನೆಲೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ್ ವಿರುದ್ಧ ಗಂಭೀರ ಪ್ರಕರಣ ದಾಖಲಿಸಬೇಕು. ಈ ಬಗ್ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಕ್ರಮ ಬಗ್ಗೆ ವರದಿ ಸಲ್ಲಿಸಿದೆ. ಈ ಬಗ್ಗೆ ಸಮಾಜ ಪರಿವರ್ತನ ಸಮುದಾಯ ಸಂಘಟನೆ ಸೇರಿದಂತೆ ಇತರ ಸಂಘಟನೆಗಳು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರಿಗೆ ಅನೇಕ ಸಲ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಮಂಜೂರಾದ ಜಾಗವನ್ನು ಹೊರತುಪಡಿಸಿ ಬೇರೆಡೆ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದು, ತಕ್ಷಣವೇ ಮಂಜೂರಾದ ಗಣಿಗಾರಿಕೆಯಿಂದ ತೆಗೆದ ಕಲ್ಲು ಕ್ರಷರ್‍ಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಕೈಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಎಂ.ಸಿ ಹಾವೇರಿ, ಎನ್.ಸಿ.ದೊಡ್ಡಮನಿ, ಪಾಷಾ, ಬಲ್ಲೂರು ರವಿಕುಮಾರ್ ಮತ್ತಿತರರು ಇದ್ದರು.



