ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮೊಮ್ಮಗಳು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ 10 ಗಂಟೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪದ್ಮಾವತಿ ಪುತ್ರಿ ಸೌಂದರ್ಯ(30) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾರೆ. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದದ್ದು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಅವರು ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೌಂದರ್ಯ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದರು. 2018ರಲ್ಲಿ ವೈದ್ಯ ಡಾ. ನೀರಜ್ ಅವರನ್ನು ಸೌಂದರ್ಯ ಮದುವೆಯಾಗಿದ್ದರು. ಮೃತ ಸೌಂದರ್ಯಗೆ ಒಂದು ಮಗು ಇದೆ. ಸೌಂದರ್ಯ ಪತಿ ನೀರಜ್ ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು. 10 ಗಂಟೆ ಸುಮಾರಿಗೆ ಸೌಂದರ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಕೆಲಸದವರು ಬಂದಾಗ ಬಾಗಿಲು ತೆಗೆಯದಿದ್ದಾಗ ಸೌಂದರ್ಯ ಪತಿ ಡಾ. ನೀರಜ್‌ಗೆ ಕೆಲಸದವರು ಕರೆ ಮಾಡಿದ್ದರು. ಮನೆ ಕೆಲಸದವರು ಫೋನ್ ಮಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ ಸುದ್ದಿ ಕೇಳಿಬರುತ್ತಿದ್ದಂತೆ ಬೆಂಗಳೂರಿನ ಕೆಕೆ ರಸ್ತೆಯಲ್ಲಿರುವ ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ಆಗಮಿಸಿದ್ದಾರೆ.