ದಾವಣಗೆರೆ: ಸಾರ್ವಜನಿಕ ಶಿಕ್ಷಣ ಇಲಾಖೆಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8ನೇ ತರಗತಿ) ನೇಮಕಾತಿಗೆ ಸಂಬಂಧವಾಗಿ ಮೇ.21 ರಿಂದ 22 ರವರೆಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪರೀಕ್ಷಾ ಕೇಂದ್ರ ಸುತ್ತಮುತ್ತ ಕನಿಷ್ಠ 200 ಮೀಟರ್ ವ್ಯಾಪ್ತಿಯೊಳಗೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.
ಪರೀಕ್ಷೆ ಸುಗಮವಾಗಿ ನಡೆಯಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರಗಳು ನಡೆಯದಂತೆ ತಡೆಗಟ್ಟುವ ಸಲುವಾಗಿ ದಾವಣಗೆರೆ ನಗರದ ಮೋತಿ ವೀರಪ್ಪ ಪದವಿ ಪೂರ್ವ ಕಾಲೇಜು, ರಾಜನಹಳ್ಳಿ ಸೀತಮ್ಮ ಮಹಿಳಾ ಪದವಿ ಪೂರ್ವ ಕಾಲೇಜು(ಪ್ರೌಡಶಾಲಾ ವಿಭಾಗ), ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಪಿ.ಬಿ ರಸ್ತೆ ದಾವಣಗೆರೆ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುವ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ ಹಾಗೂ ಪರೀಕ್ಷಾ ಕೇಂದ್ರದ ಸಮೀಪವಿರುವ ಜೆರಾಕ್ಸ್ ಅಂಗಡಿ, ಕಂಪ್ಯೂಟರ್ ಅಂಗಡಿಗಳು ಮತ್ತು ಸೈಬರ್ ಕೆಫೆಗಳನ್ನು ತೆರೆಯದಂತೆ ಮುಚ್ಚಬೇಕೆಂದು ಆದೇಶಿಸಿದ್ದಾರೆ. ಈ ಆದೇಶವು ಪರೀಕ್ಷಾರ್ಥಿಗಳಿಗೆ ಹಾಗೂ ಪರೀಕ್ಷೆಯ ಕರ್ತವ್ಯ ನಿರ್ವಹಿಸಲು ನೇಮಕಾತಿ ಆದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ. ಪರೀಕ್ಷಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಬಿಡಲು ಬರುವ ಪೋಷಕರು ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರದ ಬಳಿ ಗುಂಪುಗೂಡುವುದು, ನಿಲ್ಲುವುದು ಮತ್ತು ವಾಹನಗಳನ್ನು ಪಾರ್ಕಿಂಗ್ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.