ಬೆಂಗಳೂರು: ನೈಋತ್ಯ ಅರೇಬಿನ್ ಸಮುದ್ರದಲ್ಲಿ ಚಂಡಮಾರುತ ಎದ್ದಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಮೂರ್ನಾಲ್ಕು ದಿನ ಸತತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ತುಮಕೂರು, ಕೋಲಾರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ.
ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಯಾವುದೇ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿಗೆ ಹಾನಿಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ನೀಡಲಾಗಿದೆ. ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಜಿಲ್ಲಾಡಳಿತ ನಿನ್ನೆ ಶಾಲೆಗಳಿಗೆ ರಜೆ ಘೋಷಿಸಿತ್ತು. ಉತ್ತರ ಕರ್ನಾಟಕದಲ್ಲಿ ಇಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಮತ್ತು ನಾಳೆಯಿಂದ ಸಾಕಷ್ಟು ವ್ಯಾಪಕ ಮಳೆಯಾಗುತ್ತದೆ. 4 ಮತ್ತು 5ನೇ ದಿನದಂದು ಮಳೆಯಾಗುವ ನಿರೀಕ್ಷೆ ಇದೆ.



