ಡಿವಿಜಿ ಸುದ್ದಿ, ಬೆಂಗಳೂರು: ಕಲಬುರ್ಗಿಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಎಚ್.ಎಸ್.ವೆಂಕಟೇಶಮೂರ್ತಿ ಅವರು ಆಯ್ಕೆಯಾಗಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಲಬುರ್ಗಿಯ ಸಾಹಿತ್ಯ ಸಮ್ಮೇಳನ 2020ರ ಫೆಬ್ರುವರಿ 5, 6 ಹಾಗೂ 7ರಂದು ಗುಲಬರ್ಗಾ ವಿ.ವಿ. ಆವರಣದಲ್ಲಿ ನಡೆಯಲಿದೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿರಿಯ ಲೇಖಕಿಯರಾದ ವೈದೇಹಿ, ಸಾರಾ ಅಬೂಬಕರ್, ಜಿ.ಎಸ್. ಆಮೂರ, ಗೊ.ರು. ಚನ್ನಬಸಪ್ಪ, ಕುಂ.ವೀರಭದ್ರಪ್ಪ, ಎಚ್.ಎಸ್.ವೆಂಕಟೇಶಮೂರ್ತಿ, ವೀಣಾ ಶಾಂತೇಶ್ವರ ಅವರ ಹೆಸರುಗಳು ಚರ್ಚೆಯಲ್ಲಿತ್ತು. ಅಂತಿಮವಾಗಿ ವೆಂಕಟೇಶಮೂರ್ತಿ ಅವರನ್ನು ಆಯ್ಕೆ ಮಾಡಲಾಯಿತು ಎಂದರು.
ಚನ್ನಗಿರಿ ತಾಲ್ಲೂಕಿನ ಹೋದಿಗೆರೆ ಗ್ರಾಮದಲ್ಲಿ 1944ರ ಜೂನ್ 23ರಂದು ಹುಟ್ಟಿದ ಇವರು ಈಗ 75ನೇ ವಸಂತದ ಸಂಭ್ರಮದಲ್ಲಿದ್ದಾರೆ. ತಂದೆ ನಾರಾಯಣ ಭಟ್ಟರು, ತಾಯಿ ನಾಗರತ್ನಮ್ಮ. ಪ್ರಾಥಮಿಕ ಶಿಕ್ಷಣವನ್ನು ಹೋದಿಗೆರೆ, ಹೊಳಲ್ಕೆರೆಗಳಲ್ಲಿ ಮುಗಿಸಿದರು. ಕಾಲೇಜಿನ ವಿದ್ಯಾಭ್ಯಾಸ ಚಿತ್ರದುರ್ಗದಲ್ಲಿ ಪೂರೈಸಿ ಭದ್ರಾವತಿಯಲ್ಲಿ ಡಿಪ್ಲೊಮ ಪಡೆದು ಮಲ್ಲಾಡಿ ಹಳ್ಳಿಯ ಪ್ರೌಢಶಾಲೆಯ ಕ್ರಾಫ್ಟ್ ಟೀಚರ್ ಆಗಿ ವೃತ್ತಿ ಜೀವನ ಆರಂಭಿಸಿದರು.
ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ., ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದರು. ಕನ್ನಡದಲ್ಲಿ ಕಥನ ಕವನಗಳು ಮಹಾಪ್ರಬಂಧ ಮಂಡಿಸಿ ಪಿಎಚ್.ಡಿ ಪದವಿ ಗಳಿಸಿದರು.ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ 30 ವರ್ಷ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯದಲ್ಲಿ ತಮ್ಮದೇ ಛಾಪು ಮೂಡಿಸಿದ ಎಚ್ .ಎಸ್. ವೆಂಕಟೇಶ ಮೂರ್ತಿ ಅವರು ಕಾವ್ಯ, ನಾಟಕ,ಕಾದಂಬರಿ, ಮಕ್ಕಳ ಸಾಹಿತ್ಯ, ಚಲನಚಿತ್ರ ಗೀತೆ ರಚಿಸಿದ್ದಾರೆ.