ಬೆಂಗಳೂರು: 2024 ರ ವೇಳೆಗೆ ಪ್ರತಿಯೊಬ್ಬರಿಗೂ ಸೂರು ಒದಗಿಸುವ ದೃಷ್ಟಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ರಾಜ್ಯದಲ್ಲಿ 18 ಲಕ್ಷ ಮನೆಗಳನ್ನು ಮುಂದಿನ ಮೂರು ವರ್ಷಗಳಲ್ಲಿ ನಿರ್ಮಿಸಲು ಅವಕಾಶ ನೀಡಿ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಮಾಜದ ಕಟ್ಟ ಕಡೆಯ ಜನರಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಲು ನೆರವಾಗುವ ಜನಧನ, ಸ್ವಚ್ಛ ಭಾರತ್, ಪಿಎಂ ಸ್ವನಿಧಿ, ಪಿಎಂ ಕಿಸಾನ್ ಸಮ್ಮಾನ್ ಯೋಜನೆ, ಆಯುಷ್ಮಾನ್ ಭಾರತ್ ಮುಂತಾದ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಸಂಭ್ರಮದಲ್ಲಿದ್ದೇವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ನಡೆಸುತ್ತಿರುವ ಜನಪರ ಆಡಳಿತಕ್ಕೆ ಎಂಟು ವರ್ಷಗಳು ತುಂಬಿದೆ. ಆತ್ಮಾವಲೋಕನ ಹಾಗೂ ಸಿಂಹಾವಲೋಕನ ಮಾಡಲು ಇದು ಒಂದು ಸುಸಂದರ್ಭ. ಕಳೆದ 75 ವರ್ಷಗಳಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಿ, ಬೆಳೆಸಿರುವುದೇ ನಮ್ಮ ದೇಶದ ದೊಡ್ಡ ಸಾಧನೆ. ಆದರೆ ತುರ್ತು ಪರಿಸ್ಥಿತಿ ಘೋಷಣೆ ನಮ್ಮ ಇತಿಹಾಸದಲ್ಲಿ ಒಂದು ಕಪ್ಪುಚುಕ್ಕೆಯಾಗಿ ಉಳಿದಿದೆ. ತುರ್ತುಪರಿಸ್ಥಿತಿಯ ವಿರುದ್ಧ ಜನಾಂದೋಲನ ನಡೆಸಿ, ಪ್ರಜಾಪ್ರಭುತ್ವವನ್ನು ಮರುಸ್ಥಾಪನೆ ಮಾಡಿರುವುದು, ನಮ್ಮ ಪ್ರಜಾಪ್ರಭುತ್ವದ ಅಂತಃಶಕ್ತಿಗೆ ಸಾಕ್ಷಿ ಎಂದರು.
ಸಚಿವರಾದ ಗೋವಿಂದ ಎಂ. ಕಾರಜೋಳ, ಎಸ್.ಟಿ. ಸೋಮಶೇಖರ್, ಆರಗ ಜ್ಞಾನೇಂದ್ರ, ಶಶಿಕಲಾ ಜೊಲ್ಲೆ, ವಿ. ಸೋಮಣ್ಣ, ಬಿ.ಸಿ.ನಾಗೇಶ್, ಸಂಸದ ಪಿ.ಸಿ. ಮೋಹನ್ ಮತ್ತಿತರ ಗಣ್ಯರು ಭಾಗವಹಿಸಿದ್ದರು.