ಡಿವಿಜಿ ಸುದ್ದಿ,ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಹೊನ್ನಾಳಿ ತಾಲ್ಲೂಕು ಆಸ್ಪತ್ರೆ ಹಾಗೂ ಹಿರೇಮಠ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲ್ಲೂಕು ಆಸ್ಪತ್ರೆಯಲ್ಲಿ ಸಾರ್ವಜನಿಕರನ್ನು ಕಾಯಿಸದೇ, ಶೀಘ್ರವಾಗಿ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದರು. ಗುಣಮಟ್ಟದ ಆಹಾರ ನೀಡುವಂತೆ, ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು. ಔಷಧಿಗಳ ಪೂರೈಕೆ ಕುರಿತು ವೈದ್ಯಾಧಿಕಾರಿಗಳು ಸೂಕ್ತ ಗಮನ ಹರಿಸಬೇಕು. ಪುನಃ ಅನಿರೀಕ್ಷಿತ ಭೇಟಿ ನೀಡಿ ಮರು ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಇನ್ನು ತಾಲ್ಲೂಕಿನ ಹಿರೇಮಠ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಸಮಯಕ್ಕೆ ಸರಿಯಾಗಿ ನೀಡುವಂತೆ, ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲಯಗಳನ್ನು ಶುಚಿಯಾಗಿ ಇಡುವಂತೆ ಕ್ರಮ ಕೈಗೊಳ್ಳಲು ಅಂಗನವಾಡಿ ಕಾರ್ಯಕರ್ತರಿಗೆ ಸೂಚನೆ ನೀಡಿದರು.



