ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ರಾಜಸ್ಥಾನದಿಂದ ಈಶಾನ್ಯ ಭಾಗದವರೆಗೂ ಟ್ರಫ್ ಇರುವ ಪರಿಣಾಮ ದಾವಣಗೆರೆ ಸೇರಿ 19 ಜಿಲ್ಲೆಯಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ , ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅ.13ರ ವರೆಗೂ ಮಳೆ ಮುಂದುವರಿಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.