ಜಗಳೂರು: ನ.23 ರಂದು ಬಿಜೆಪಿಯ ಜನ ಸಂಕಲ್ಪ ಯಾತ್ರೆ ನಡೆಯಲಿದ್ದು, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿಂತೆ ಸಂಪುಟದ ಅನೇಕ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ. ಈಗಾಗಲೇ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಾಸಕ ಎಸ್.ವಿ.ರಾಮಚಂದ್ರ ತಿಳಿಸಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಪಕ್ಷದ ಕಾರ್ಯಕ್ರಮವಾಗಿದ್ದು ಪಟ್ಟಣದ ಬಯಲು ರಂಗ ಮಂದಿರದಲ್ಲಿ 35 ಸಾವಿರ ಜನ ಕೂರಲು ಬೃಹತ್ ವೇದಿಕೆ ಸಿದ್ಧವಾಗುತ್ತಿದೆ. ಬೆಂಗಳೂರಿನಿಂದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್‍ಸಿ ರವಿಕುಮಾರ್ ನೇತೃತ್ವದ ತಂಡ ಸಿದ್ಧತೆಗಳನ್ನು ವೀಕ್ಷಣೆ ಮಾಡಲು ಆಗಮಿಸಿದ್ದರು. ತಾಲೂಕು ಕ್ರೀಡಾಂಗಣದಲ್ಲಿ ಹೆಲಿಪ್ಯಾಡ್ ನಿರ್ಮಾಣ, ರಸ್ತೆಗಳಲ್ಲಿ ಗುಂಡಿ ಮುಚ್ಚುವ ಕಾರ್ಯ, ಪಟ್ಟಣದ ಸ್ವಚ್ಛತೆ ಸೇರಿದಂತೆ ಆಯಾ ಇಲಾಖೆಗಳ ಅಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿ ನೀಡಿದ್ದೇವೆ. ಪ್ರವಾಸಿ ಮಂದಿರದಲ್ಲಿ ಗಣ್ಯರು ತಂಗು ಸ್ಥಳದ ಸ್ವಚ್ಛತೆ ಸೇರಿದಂತೆ ಯಾವುದೇ ಲೋಪವಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಮಹಾತ್ವಾಕಾಕ್ಷಿಯ 1336 ಕೋಟಿ ರೂ ಭದ್ರಾ ಮೇಲ್ದಂಡೆ ಯೋಜನೆ ಈಗಾಗಲೇ ಶಂಕುಸ್ಥಾಪನೆ ನೆರವೇರಿಸಲಾಗಿದೆ. ತರಳಬಾಳು ಶ್ರೀಗಳ ನೇತೃತ್ವದಲ್ಲಿ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಈಗಾಗಲೇ ಭರದಿಂದ ಸಾಗುತ್ತಿದೆ. ಜನವರಿಗೆ ಬಹುತೇಕ ಯೋಜನೆ ಪೂರ್ಣಗೊಳ್ಳುವ ವಿಶ್ವಸವಿದೆ. ಫ್ಲೋರೈಡ್ ಮುಕ್ತ ತಾಲೂಕು ಮಾಡುವ ಉದ್ದೇಶಶದಿಂದ 164 ಹಳ್ಳಿಗಳಿಗೆ 428 ಕೋಟಿ ರೂ ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಮುಖ್ಯಮಂತ್ರಿಗಳು ಅಂದೇ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದರು.



