ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ನೌಕರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆರದ್ದುಪಡಿಸಿ ಈ ಹಿಂದೆ ಜಾರಿ ಇದ್ದ, ನಿಶ್ಚಿತ ಪಿಂಚಣಿ ಯೋಜನೆ ಜಾರಿಗೆ ತರಲಾಗುವುದು ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್.ನೌಕರರ ಸಂಘದವರು ಓಟ್ ಫಾರ್ ಓ.ಪಿ.ಎಸ್. ಅಭಿಯಾನದ ಮನವಿ ಸ್ವೀಕರಿಸಿ ಅವರು ಮಾತನಾಡಿ, 2006ರ ಏ. 1 ರಿಂದ ಸರ್ಕಾರಿ ನೌಕರರಿಗೆ ಸೇರಿರುವವರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ ಜಾರಿಗೆ ತರಲಾಗಿದೆ. ಇದೊಂದು ಅವೈಜ್ಞಾನಿಕ ಯೋಜನೆ. ಓಪಿಎಸ್‌ನಿಂದ ನೌಕರರು ತಮ್ಮ ನಿವೃತ್ತಿ ಜೀವನವನ್ನೇ ಕಳೆದುಕೊಂಡಿದ್ದಾರೆ. ಈ ಯೋಜನೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಈ ಬಗ್ಗೆ ಮುಂದಿನ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿಪ್ರಸ್ತಾಪ ಮಾಡುತ್ತೇವೆ. ಮತ್ತೆ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೆ ತರುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು. ಈ ಸರ್ಕಾರ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ನಿಶ್ಚಿತ ಪಿಂಚಣಿ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜಸ್ತಾನ, ಛತ್ತೀಸ್‌ಘಡ ರಾಜ್ಯಗಳಲ್ಲಿ ಹಳೇ ಪಿಂಚಣಿ ಯೋಜನೆ ಮರು ಜಾರಿಗೊಳಿಸಲಾಗಿದೆ. ಹಿಮಾಚಲಪ್ರದೇಶದಲ್ಲಿ ನಡೆದ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ಭರವಸೆಯಂತೆ ಪುನಃ ಹಳೇ ಪಿಂಚಣಿ ಯೋಜನೆ ಮರು ಜಾರಿಗೊಳಿಸಲಾಗುವುದು ಎಂದು ಹೇಳಲಾಗಿತ್ತು. ಈ ಯೋಜನೆಯಿಂದ 5 ಲಕ್ಷ ನೌಕರರಿಗೆ ಅನುಕೂಲವಾಗಲಿದೆ. ನೌಕರರ ನಿವೃತ್ತ ಜೀವನಕ್ಕೆ ಆಧಾರವಾಗಲಿದೆ ಎಂದರು.



