ದಾವಣಗೆರೆ; ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ವನ್ಯಜೀವಿಗಳ ಅಕ್ರಮ ಸಾಕಾಣಿಕೆ ಹಿನ್ನಲೆ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಈ ಕೂಡಲೇ ಬಂಧಿಸಬೇಕು. ಈ ಪ್ರಕರಣದಲ್ಲಿ ಬಂಧಿಸಿರುವ ಅಮಾಯಕರನ್ನು ಕೈ ಬಿಡುವಂತೆ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್ , ಮಾಜಿ ಸಚಿವರು ವನ್ಯಜೀವಿ ಕೊಂದು ತಿಂದಿದ್ದಲ್ಲದೆ, ಫಾರ್ಮ್ ಹೌಸ್ ನಲ್ಲಿ ವನ್ಯಜೀವಿಗಳನ್ನು ಅಕ್ರಮವಾಗಿ ಇರಿಸಿಕೊಂಡಿದ್ದರು. ವನ್ಯಜೀವಿ ಕಾನೂನು ಪ್ರಕಾರ ಬಂಧಿಸುವಂತೆ ಮಲ್ಲಿಕಾರ್ಜುನ್ ಬಂಧಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.
ಈ ಕುರಿತಂತೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ. ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹಾಗೂ ದಾವಣಗೆರೆಯ ವಲಯ ಅರಣ್ಯ ಅಧಿಕಾರಿ ಮತ್ತು ಬೆಂಗಳೂರಿನ ಸಿಸಿಬಿ ಪೊಲೀಸ್ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕೆಂದು ಒತ್ತಾಯಿಸಲಾಗಿದೆ ಎಂದು ಹೇಳಿದರು.
ದಾವಣಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿದ್ದು, ಕೆಂಪಣ್ಣಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ, ಯಾವುದೇ ಆರೋಪ ಮಾಡುವ ಬದಲಿಗೆ ಸೂಕ್ತ ದಾಖಲೆ ಇಟ್ಟುಕೊಂಡು ಆರೋಪ ಮಾಡಬೇಕು. ಕೆಂಪಣ್ಣ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆ ಇಲ್ಲದ ಪರಿಣಾಮವಾಗಿ ಕೋರ್ಟಿನ ಆದೇಶದ ಮೇರೆಗೆ ಬಂಧನ ಮಾಡಲಾಗಿತ್ತು. ಕಾಂಗ್ರೆಸ್ ಪಕ್ಷಕ್ಕೆ ಕೋರ್ಟಿನ ಬಗ್ಗೆ ಕಾಳಜಿ ಇಲ್ಲ. ಪ್ರಕರಣದ ತನಿಖೆಯ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ಈ ಸಂದರ್ಭದಲ್ಲಿ ಧೂಡಾ ಅಧ್ಯಕ್ಷ ಎ.ವೈ.ಪ್ರಕಾಶ್, ಮೇಯರ್ ಜಯಮ್ಮ, ರಾಜನಹಳ್ಳಿ ಶಿವಕುಮಾರ್, ಲೋಕಿಕೆರೆ ನಾಗರಾಜ್, ಎಲ್.ಡಿ.ಗೋಣೆಪ್ಪ, ಸೋಗಿ ಶಾಂತಕುಮಾರ್, ಎಸ್.ಟಿ.ವೀರೇಶ್, ರಾಕೇಶ್ ಜಾಧವ್, ಚೇತನ್ ಇತರರು ಇದ್ದರು.



