ಡಿವಿಜಿ ಸುದ್ದಿ, ತುಮಕೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನವರಿ 02 ರಂದು ನಗರಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ತುಮಕೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.

ಇದೇ ಸಂದರ್ಭದಲ್ಲಿ ಸಮಾರಂಭದ ಸ್ಥಳ ಪರಿಶೀಲನೆ ನಡೆಸಿದರು. ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾ ಸ್ವಾಮೀಜಿ, ವಸತಿ ಸಚಿವ ವಿ.ಸೋಮಣ್ಣ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಉಪಸ್ಥಿತರಿದ್ದರು.
ಸಿದ್ಧಗಂಗಾ ಮಠ, ಜೂನಿಯರ್ ಕಾಲೇಜು ಮೈದಾನ ಸೇರಿದಂತೆ ಹಲವೆಡೆ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಜ.2ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12ರವರೆಗೆ ರಾಜ್ಯ ಪಾನಿಯ ನಿಗಮದ ಘಟಕಗಳನ್ನು ಹೊರತು ಪಡಿಸಿ ಪಾಲಿಕೆ ವ್ಯಾಪ್ತಿಯ ಎಲ್ಲ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಕಳೆದ ಒಂದು ವಾರದಿಂದ ವಿವಿಧ ಸಚಿವರು, ಶಾಸಕರು ನಿರಂತರವಾಗಿ ತುಮಕೂರಿಗೆ ಭೇಟಿ ನೀಡಿ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಪ್ರಮುಖರನ್ನು ಹೊರತುಪಡಿಸಿ ಪೊಲೀಸರು ಯಾರೊಬ್ಬರನ್ನೂ ಬಿಡುತ್ತಿಲ್ಲ. ಕೇಂದ್ರದ ಭದ್ರತಾ ಪಡೆಯ ಸಿಬ್ಬಂದಿ ಈಗಾಗಲೇ ತುಮಕೂರಿಗೆ ಭೇಟಿ ನೀಡಿ ಭದ್ರತೆ ಮತ್ತಷ್ಟು ಬಿಗಿಪಡಿಸಿದ್ದಾರೆ.



