ನವದೆಹಲಿ: ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣದ ಜಾಮೀನು ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಕಿಡಿಕಾರಿದೆ.
ಕೆಎಸ್‌ಡಿಎಲ್ ಟೆಂಡರ್ ನೀಡಲು ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಲೋಕಾಯುಕ್ತ ಸಂಸ್ಥೆ ಸುಪ್ರೀಂಕೋರ್ಟ್‌ಗೆ ಮಂಗಳವಾರ ಅರ್ಜಿ ಸಲ್ಲಿಸಿತ್ತು. ಇದು ಜಾಮೀನು ರದ್ದತಿಗೆ ಸಂಬಂಧಿಸಿದ ವಿಷಯ. ಹೈಕೋರ್ಟ್ ಈಗಾಗಲೇ ಪ್ರಕರಣದ ವಿಚಾರಣೆ ನಡೆಸಿದ್ದು, ಈ ವಿಷಯದಲ್ಲಿ ಅವಸರವೇಕೆವೆಂದು ಪ್ರಶ್ನಿಸಿದೆ.
ಲೋಕಾಯುಕ್ತದ ಪರವಾಗಿ ಹಾಜರಾದ ಹಿರಿಯ ವಕೀಲ ಬಸವಪ್ರಭು ಪಾಟೀಲ ಅವರು ತುರ್ತು ವಿಚಾರಣೆಗಾಗಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದರು. ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಿರುವ ಹೈಕೋರ್ಟ್‌ನ ತರಾತುರಿ ಆದೇಶ ತಪ್ಪು. ಈ ಪ್ರಕರಣದ ವಿಚಾರಣೆಯನ್ನು ಶುಕ್ರವಾರ ನಡೆಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.
ಆರೋಪಿ ಶಾಸಕರಾಗಿದ್ದು, ಅವರ ಮನೆಯಿಂದ ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ತುರ್ತು ವಿಚಾರಣೆ ಮಾಡಬೇಕು ಎಂದು ಲೋಕಾಯುಕ್ತ ಪರ ವಕೀಲರು ಮನವಿ ಮಾಡಿದ್ದರು.



