ದಾವಣಗೆರೆ: ನಾಳೆ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಒಂದು ವೇಳೆ ಅತಂತ್ರ ಫಲಿತಾಂಶ ಬಂದಲ್ಲಿ ಬಿಜೆಪಿ ಬೆಂಬಲಿಸುವಂತೆ ಖುದ್ದು ಸಿಎಂ ಬಸವರಾಜ ಬೊಮ್ಮಯಿ ಅವರು ಹರಪನಹಳ್ಳಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಂ.ಪಿ. ಲತಾ ಅವರಿಗೆ ಕರೆ ಮಾಡಿ ಮನವಿ ಮಾಡಿದ್ದಾರೆ. ಇನ್ನೂ ಬಿಜೆಪಿಯಿಂದ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿದ್ದ ಮಾಡಾಳ್ ಮಲ್ಲಿಕಾರ್ಜುನ ಅವರಿಗೂ ಸಹ ಪಕ್ಷದಲ್ಲಿಯೇ ಉಳಿಯುವಂತೆ ಕೆರೆ ಬಂದಿದೆ.
ಮಾಜಿ ಉಪಮುಖ್ಯಮಂತ್ರಿ ಎಂಪಿ ಪ್ರಕಾಶ್ ಅವರ ಮಗಳಾದ ಎಂಪಿ ಲತಾ ಅವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದರು. ಟಿಕೆಟ್ ಕೈ ತಪ್ಪಿದ್ದರಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇದೀಗ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಕರೆ ಮಾಡಿ, ಯೋಗಕ್ಷೇಮ ವಿಚಾರಿಸಿದ್ದು, ಅತಂತ್ರ ಫಲಿತಾಂಶ ಬಂದಲ್ಲಿ ಬಿಜೆಪಿ ಬೆಂಬಲಿಸುವಂತೆ ಕೋರಿದ್ದಾರೆ.
ಇನ್ನೂ ಲಂಚ ಪ್ರಕರಣದಲ್ಲಿ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಸಿಕ್ಕಿ ಬಿದ್ದಿದ್ದರಿಂದ ಇನ್ನೊಬ್ಬ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ ಗೆ ಬಿಜೆಪಿ ಟಿಕೆಟ್ ತಪ್ಪಿತ್ತು. ಇದರಿಂದ ಪಕ್ಷೇತರ ಅಭ್ಯರ್ಥಿಯಾಗಿದ್ದರು. ಪಕ್ಷೇತರ ಅಭ್ಯರ್ಥಿಯಾಗಿದ್ದರೂ, ಮಾಡಾಳ್ ವಿರೂಪಾಕ್ಷಪ್ಪ ಬಿಜೆಪಿಗೆ ರಾಜೀನಾಮೆ ನೀಡಿರಲಿಲ್ಲ. ಹೀಗಾಗಿ ಬಿಜೆಪಿ ಬೆಂಬಲಿಸುವಂತೆ ಬಿಜೆಪಿಯಿಂದ ಮಾಡಾಳ್ ಮಲ್ಲಿಕಾರ್ಜನ ಗೆ ಕರೆ ಮಾಡಲಾಗಿದೆ.



