ದಾವಣಗೆರೆ: ಬಿಜೆಪಿಯ ಮಾಜಿ ಸಚಿವ ರೇಣುಕಾಚಾರ್ಯ ಕಾಂಗ್ರೆಸ್ ಸೇರುವುದಿಲ್ಲ, ನಮ್ಮ ಭೇಟಿಯ ನಡುವೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಇದೊಂದು ಸೌಹಾರ್ದಯುತ ಭೇಟಿ. ಇದಕ್ಕೆ ಯಾವುದೇ ಅರ್ಥ ಕಲ್ಪಿಸಬಾರದು. ಭೇಟಿ ವೇಳೆ ಟೀ ಕುಡಿಸಿ ಕಳಿಸಿದ್ದೇನೆ ಅಷ್ಟೇ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಹೇಳಿದರು.
ರೇಣುಕಾಚಾರ್ಯ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಭೇಟಿ ನಂತರ ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ಸುದ್ದಿ ಹರಡಿತ್ತು. ಅದರಲ್ಲೂ ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ್ ರವರನ್ನು ಭೇಟಿ, ಚರ್ಚೆಗೆ ಇನ್ನಷ್ಟು ಪುಷ್ಟಿ ನೀಡಿತ್ತು. ಇದಕ್ಕೆ ಇಂದು ಪ್ರತಿಕ್ರಿಯೆ ನೀಡಿದ ಸಚಿವರು, ರೇಣುಕಾಚಾರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದಾರೆ. ರೇಣುಕಾಚಾರ್ಯ ಮಾಜಿ ಸಿಎಂ ಯಡಿಯೂರಪ್ಪ ಆಪ್ತರಾಗಿದ್ದರು. ಲೋಕಸಭಾ ಚುನಾವಣೆಗೆ ನಾನು ಕೂಡ ಬಿಜೆಪಿ ಪಕ್ಷದ ಆಕಾಂಕ್ಷಿ ಎಂದು ಹೇಳಿದ್ದಾರೆ ಎಂದರು.
ರೇಣುಕಾಚಾರ್ಯ ಕಾಂಗ್ರೆಸ್ ಪಕ್ಷ ಸೇರಿಸಿಕೊಳ್ಳುವ ಬಗ್ಗೆ ಸಿಎಂ, ಡಿಸಿಎಂ ನನಗೆ ಯಾವುದೇ ಅಭಿಪ್ರಾಯ ಕೇಳಿಲ್ಲ. ಯಾರೇ ಬಂದರೂ ನಮ್ಮ ಮನೆ ಬಾಗಿಲು ಓಪನ್ ಇರುತ್ತೆ, ಹೀಗಾಗಿ ರೇಣುಕಾಚಾರ್ಯ ಬಂದವರು ಟೀ ಕುಡಿಸಿ ಕಳುಹಿಸಿದ್ದೇನೆ. ಕಾಂಗ್ರೆಸ್ ತತ್ವ, ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ. ರಾಜ್ಯ ಬಿಜೆಪಿ ಚುಕ್ಕಾಣಿ ಇಲ್ಲದ ಹಡಗಿನಂತಾಗಿದೆ. ವಿರೋಧ ಪಕ್ಷದ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷ ನೇಮಿಸಲು ಸಾಧ್ಯವಾಗಿಲ್ಲ ಎಂದು ಕುಟುಕಿದರು.



