ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್ ನೀಡದಿದ್ದರೆ ನನ್ನ ಬೆಂಬಲಿಗರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ವರಿಷ್ಠರು ಟಿಕೆಟ್ ನೀಡಿದರೆ ಸ್ಪರ್ಧೆ ಮಾಡಲು ಸಿದ್ದನಿದ್ದೇನೆ. ಈಗಾಗಲೇ ನನ್ನ ಅಭಿಪ್ರಾಯವನ್ನು ತಿಳಿಸಿದ್ದೇವೆ. ನನಗೆ ಟಿಕೆಟ್ ಕೊಟ್ಟರೆ ಕಂಡಿತವಾಗಿಯೂ ಸ್ಪರ್ಧೆ ಮಾಡುತ್ತೇನೆ. ಇಲ್ಲದಿದ್ದರೆ ಬೆಂಬಲಿಗರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ. ನಾನು ಕಾಂಗ್ರೆಸ್ ಸೇರುವ ಬಗ್ಗೆ ಚಿಂತೆ ಮಾಡಿಲ್ಲ. ಪರಿಸ್ಥಿತಿಗೆ ಅನುಗುಣವಾಗಿ ರಾಜಕೀಯ ನಿರ್ಧಾರವನ್ನು ತೆಗೆದುಕೊಳ್ಳುತ್ತೇನೆ ಎಂದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದರಿಂದಲೇ ವಿಧಾನಸಭೆ ಚುನಾವಣೆಯಲ್ಲಿ ನಮಗೆ ಸೋಲು ಉಂಟಾಯಿತು. ಈಗಲಾದರೂ ಅವರ ಶಕ್ತಿ ಸಾಮರ್ಥ್ಯ ಏನೆಂಬುದು ಕೆಲವರಿಗೆ ಅರ್ಥವಾದ್ರೆ ಸಾಕು ಎಂದು ಸ್ವಪಕ್ಷೀಯರ ವಿರುದ್ಧವೇ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. ಅವರಿಗೆ ಸ್ವತಂತ್ರವಾಗಿ ಕೆಲಸ ಮಾಡಲು ಬಿಡಬೇಕು. ಕೆಲವು ಶಕ್ತಿಗಳು ಅಡ್ಡಿಪಡಿಸುವ ಕೆಲಸ ಮಾಡುತ್ತಲೇ ಇವೆ. ತಾವು ಮಾಡುವುದಿಲ್ಲ, ಬೇರೆಯವರು ಮಾಡಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.



