ಬೆಂಗಳೂರು: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಬೆಳಗಾವಿ, ಬೀದರ್, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕೊಡಗಿನಲ್ಲಿ ಹಗುರದಿಂದ ಸಾಧಾರಣ ಮಳೆಯಾದರೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಬೀದರ್ ಮತ್ತು ಬೆಳಗಾವಿಯಲ್ಲಿ ವ್ಯಾಪಕ ಮಳೆಯಾಗಲಿದೆ.
ಕಲಬುರಗಿ, ರಾಯಚೂರು, ವಿಜಯಪುರ, ಧಾರವಾಡ ಮತ್ತು ಯಾದಗಿರಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರದ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಮನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬೆಂಗಳೂರು ಗ್ರಾಮಾಂತರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ 40-45 ಕಿ.ಮೀ ವೇಗದಲ್ಲಿ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣ ಇರುತ್ತದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.



