ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ನೂತನ ವೇತನ ರಚನೆಯ 7ನೇ ರಾಜ್ಯ ವೇತನ ಆಯೋಗದ ವರದಿ ಸಲ್ಲಿಸುವ ಅವಧಿಯನ್ನು ಮತ್ತೆ 5 ತಿಂಗಳು ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರಿಗೆ ವೇತನ ಪರಿಷ್ಕರಣೆಯನ್ನು ಮತ್ತೆ ಕಾಯುವಂತೆ ಮಾಡಿದೆ.
ವೇತನ ಪರಿಷ್ಕರಣೆಗೆ ಆಯೋಗ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ಅಧ್ಯಕ್ಷತೆಯ 7ನೇ ರಾಜ್ಯವೇತನ ಆಯೋಗ ರಚಿಸಲಾಗಿತ್ತು. ಈ ಹಿಂದೆ ಬಿಜೆಪಿ ಸರ್ಕಾರ ನ.19 , 2022 ರಂದು ಆಯೋಗ ರಚಿಸಿ 6 ತಿಂಗಳಲ್ಲಿ ವರದಿ ಸಲ್ಲಿಸಲು ಸೂಚಿಸಲಾಗಿತ್ತು. ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಅವಧಿಯನ್ನು ಮತ್ತೆ 6 ತಿಂಗಳು ವಿಸ್ತರಿಸಿತ್ತು. ಇದೀಗ ನವೆಂಬರ್ 18ಕ್ಕೆ ಅವಧಿ ಮುಕ್ತಾಯವಾಗುತ್ತಿತ್ತು. ಇದೀಗ ಮತ್ತೆ 5 ತಿಂಗಳು ವಿಸ್ತರಿಸಲಾಗಿದೆ.
ಈ ಸಂಬಂಧ ಆರ್ಥಿಕ ಇಲಾಖೆಯ ( ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಲಾಗಿದ್ದು, ದಿನಾಂಕ 19-11-2022ರಂದು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿರುತ್ತದೆ. ದಿನಾಂಕ 15-05-2023ರ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗದ ಕಾಲಾವಧಿಯನ್ನು ವಿಸ್ತರಿಸಲಾಗಿರುತ್ತದೆ ಎಂದಿದ್ದಾರೆ.
ಪ್ರಸ್ತುತ 7ನೇ ರಾಜ್ಯ ವೇತನ ಆಯೋಗದ ಕಾಲಾವಧಿಯು ದಿನಾಂಕ 18-11-2023ಕ್ಕೆ ಕೊನೆಗೊಳ್ಳುತ್ತಿದ್ದು, 7ನೇ ರಾಜ್ಯ ವೇತನ ಆಯೋಗವು ತನ್ನ ಕಾರ್ಯಕಲಾಪಗಳನ್ನು ಪೂರ್ಣಗೊಳಿಸಿ, ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲು ಅನುಕೂಲವಾಗುವಂತೆ, ಆಯೋಗದ ಕಾಲಾವಧಿಯನ್ನು ದಿನಾಂಕ 15-03-2024 ರವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ.



