ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಮಧ್ಯಾಹ್ನ ಊಟ ಮಾಡಿದ 25 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿದ ಘಟನೆ ನಿನ್ನೆ(ನ.28) ನಡೆದಿತ್ತು. ಈ ಪ್ರಕರಣ ಸಂಬಂಧ ವಸತಿ ಶಾಲೆಯ ಪ್ರಿನ್ಸಿಪಾಲ್ ಮಂಜುನಾಥ ಪುರದ್ ಹಾಗೂ ಹಾಸ್ಟೆಲ್ ಮೇಲ್ವಿಚಾರಕಿ ನಸೀನಾ ಬಾನು ಅವರನ್ನು ಸೇವೆಯಿಂದ ಅಮಾನತುಗೊಳಿಸಿ ದಾವಣಗೆರೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಆದೇಶಿಸಿದ್ದಾರೆ.
ಹಾಸ್ಟೆಲ್ನಲ್ಲಿ ನೀಡಿದ್ದ ಊಟದಲ್ಲಿ ಹುಳು ಇರುವ ಬಗ್ಗೆ ವಸತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ ಹಿನ್ನೆಲೆ ಅಮಾನತು ಆದೇಶಗೊಳಿಸಲಾಗಿದೆ. ಅಮಾನತುಗೊಂಡವರು ಜಿಲ್ಲಾ ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಸೂಚನೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆ ಸೇರಿದಂತೆ ಸಂತೆಬೆನ್ನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಪೋಷಕರು ವಸತಿ ಶಾಲೆ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು.
ನಿನ್ನೆ(ನ.28) ಮಧ್ಯಾಹ್ನ ಊಟ ಮಾಡಿದ ಬಳಿಕ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದರು. ವಾಂತಿ ಭೇದಿ ಶುರುವಾದ ತಕ್ಷಣವೇ ಅಸ್ವಸ್ಥ ಮಕ್ಕಳಿಗೆ ಸಂತೆಬೆನ್ನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಐವರು ಮಕ್ಕಳು ಗಂಭೀರ ಅಸ್ವಸ್ಥಗೊಂಡಿದ್ದ ಹಿನ್ನಲೆ ಕೂಡಲೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಹಾಸ್ಟೆಲ್ನಲ್ಲಿ ಸ್ವಚ್ಛತೆ ಕಾಪಾಡದೆ ಮಕ್ಕಳಿಗೆ ಆಹಾರ ನೀಡುತ್ತಿದ್ದಾರೆಂದು ಮಕ್ಕಳ ಪೋಷಕರು ಆರೋಪಿಸಿದ್ದಾರೆ.



