ದಾವಣಗೆರೆ: ಬಿಜೆಪಿ ಬಣ ರಾಜಕೀಯಕ್ಕೆ ವಿಜಯೇಂದ್ರ ಬ್ರೇಕ್; ಮಾಜಿ ಶಾಸಕರಾದ ಮಾಡಾಳ್, ಗುರುಸಿದ್ದನಗೌಡ ಪುತ್ರರು ಬಿಜೆಪಿಗೆ ಮರು ಸೇರ್ಪಡೆ…!!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ದಾವಣಗೆರೆ: ಜಿಲ್ಲಾ ಬಿಜೆಪಿಯಲ್ಲಿ ಬಣ ರಾಜಕೀಯ ತಾರಕಕ್ಕೆರಿದ ಹೊತ್ತಿನಲ್ಲಿ ಮಾಜಿ ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಮಲ್ಲಿಕಾರ್ಜುನ್, ಗುರುಸಿದ್ದನಗೌಡ‌ ಪುತ್ರ ಡಾ. ರವಿಕುಮಾರ್ ಸೇರಿ ಹಲವು ಮುಖಂಡರು ಬೆಂಗಳೂರಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ  ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಈ ಮೂಲಕ ವಿಜಯೇಂದ್ರ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್, ಮಾಜಿ ಸಚಿವ ರೇಣುಕಾಚಾರ್ಯ‌ ನಡುವಿನ ಬಣ ರಾಜಕೀಯಕ್ಕೆ ಬ್ರೇಕ್ ಹಾಕಿ, ಒಟ್ಟಾಗಿ ಹೋಗುವಂತೆ ಸೂಚನೆ ನೀಡಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ಚನ್ನಗಿರಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ವಂಚಿತರಾಗಿ ಪಕ್ಷೇತರರಾಗಿ ಮಾಡಾಳ್ ಮಲ್ಲಿಕಾರ್ಜುನ್ ಕಣಕ್ಕಿಳಿದು ಸೋಲು ಕಂಡಿದ್ದರು. ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರಿಂದ 6 ವರ್ಷ ಉಚ್ಚಾಟನೆಗೊಂಡಿದ್ದ ಅವರು ಇದೀಗ ಪಕ್ಷಕ್ಕೆ ಪುನಃ ಮರಳಿದ್ದಾರೆ. ಇನ್ನೂ ವಿಧಾನಸಭೆ ಚುನಾವಣೆ ಬಳಿಕ ಜಗಳೂರು ಮಾಜಿ ಶಾಸಕ ಗುರುಸಿದ್ದನಗೌಡ‌ ಮತ್ತು ಅವರ ಪುತ್ರ ಡಾ. ರವಿಕುಮಾರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಇದೀಗ ಈ ಇಬ್ಬರು ಮಾಜಿ ಶಾಸಕರು ಹಾಗೂ ಪುತ್ರರನ್ನು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಈ ನಾಯಕರು ಬಿಜೆಪಿ ಮರು ಸೇರ್ಪಡೆಯಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಮುಂದಾಳು ವಹಿಸಿದ್ದರು.

ಬಿಜೆಪಿಗೆ ಸೇರ್ಪಡೆ ನಂತರ ಮಾತನಾಡಿದ ಮಾಡಾಳ್ ಮಲ್ಲಿಕಾರ್ಜುನ್, ಈ ಹಿಂದೆ ಏನೆಲ್ಲಾ ಆಗಿತ್ತು ಎಂಬುದು ನಿಮಗೆಲ್ಲಾ ಗೊತ್ತಿದೆ. ನಾವೆಲ್ಲಾ ಪಕ್ಷವನ್ನು ಮತ್ತೆ ಸಂಘಟಿಸಬೇಕು, ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಬೇಕು. ವಿಜಯೇಂದ್ರ ಅವರು ಬಹುಕಾಲ ಸಿಎಂ ಆಗಬೇಕು. ಪಕ್ಷಕ್ಕೆ ಸೇರಿಸಿಕೊಂಡಿದ್ದಕ್ಕೆ ಅವರಿಗೆ ಅವರಿಗೆ ಚಿರ ಋಣಿಯಾಗಿದ್ದು, ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದರು.

ಮಾಡಾಳ್ ಮಲ್ಲಿಕಾರ್ಜುನ್ ಅವರನ್ನು ಅತಿ ಶೀಘ್ರವಾಗಿ ಬಿಜೆಪಿಗೆ ಸೇರಿಸಬೇಕೆಂದು ನಾನು ರಾಜ್ಯಾಧ್ಯಕ್ಷನಾದ ಬಳಿಕ ಒತ್ತಡ ಇತ್ತು. ಇವತ್ತು ಆ ಕಾರ್ಯ ಪೂರ್ಣಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಶಕ್ತಿ ತುಂಬಲು, ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ದೊಡ್ಡ ಅಂತರದಲ್ಲಿ ಗೆಲ್ಲಿಸಿ ಮೋದೀಜಿ ಕೈಯನ್ನು ಬಲಪಡಿಸಲು ಮಾಡಾಳ್ ವಿರೂಪಾಕ್ಷಪ್ಪ, ಮಾಡಾಳ್ ಮಲ್ಲಿಕಾರ್ಜುನ್, ಡಾ. ರವಿಕುಮಾರ್, ಗುರುಸಿದ್ದನಗೌಡ ಅವರು ಬಿಜೆಪಿ ಸೇರಿದ್ದು ಸಂತಸ ತಂದಿದೆ ಎಂದು ತಿಳಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಆಗಲು ಹಲವಾರು ಕಾರಣಗಳಿವೆ. ಆಗ ಇದ್ದ ವಾತಾವರಣ ಮತ್ತು ಇವತ್ತಿನ ವಾತಾವರಣಕ್ಕೆ ಅಜಗಜಾಂತರ ವ್ಯತ್ಯಾಸವಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರವು ಕೆಲವು ತಿಂಗಳ ಹಿಂದೆ 20-22 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸದಲ್ಲಿತ್ತು. ಈಗ ರಾಜ್ಯದಲ್ಲಿ ಸಂಪೂರ್ಣ ಬಿಜೆಪಿ ಪರವಾದ ವಾತಾವರಣವಿದೆ ಎಂದು ವಿಶ್ಲೇಷಿಸಿದರು.

ನರೇಂದ್ರ ಮೋದೀಜಿ ಅವರ ಪರವಾದ ಅಲೆ ಮತ್ತೊಮ್ಮೆ ಕಾಣುತ್ತಿದೆ. ಇದರ ಪರಿಣಾಮವಾಗಿ ಯಾವುದೇ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ನಡೆದರೂ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷ ಒಂದು ಸೀಟು ಗೆಲ್ಲಲು ಕೂಡ ತಡಕಾಟದಲ್ಲಿ ಸಿಲುಕುವ ಸ್ಥಿತಿ ಇದೆ ಎಂದು ನುಡಿದರು.

ಈ ಕ್ಷೇತ್ರ ಗೆದ್ದೇಗೆಲ್ಲುತ್ತೇವೆ ಎಂಬ ಕ್ಷೇತ್ರವನ್ನು ತೋರಿಸುವ ಸ್ಥಿತಿಯಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಇಲ್ಲ. ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ನಂತರ, ಇವತ್ತು ರಾಜ್ಯದಲ್ಲಿ ನಾಳೆ ವಿಧಾನಸಭಾ ಚುನಾವಣೆ ನಡೆದರೂ ಕೂಡ ಬಿಜೆಪಿ 130-140 ಸ್ಥಾನಗಳನ್ನು ಗೆಲ್ಲುವ ಸ್ಥಿತಿಯಲ್ಲಿದೆ ಎಂದು ತಿಳಿಸಿದರು.

ನಾಳೆ ಬಿಜೆಪಿ ದಾವಣಗೆರೆ ಜಿಲ್ಲಾಧ್ಯಕ್ಷರು ಜವಾಬ್ದಾರಿ ಸ್ವೀಕರಿಸುತ್ತಾರೆ. ಹಿರಿಯರು, ರೈತ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಮಾಜಿ ಡಿಸಿಎಂ ಈಶ್ವರಪ್ಪ ಅವರೂ ಪಾಲ್ಗೊಳ್ಳುತ್ತಾರೆ. ವಿಧಾನಪರಿಷತ್ ಅಭ್ಯರ್ಥಿಗಳು ಮತ್ತು ರಾಜ್ಯಸಭಾ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ನಾನು ದೆಹಲಿಗೆ ಹೋಗಲಿದ್ದೇನೆ. ಮುಂದಿನ ದಿನಗಳಲ್ಲಿ ನಾನು ದಾವಣಗೆರೆಗೆ ಬರುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ  ಯುವ ಮೋರ್ಚಾ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಹಿರಿಯರಾದ ರವೀಂದ್ರನಾಥ್, ರೇಣುಕಾಚಾರ್ಯ, ಮಾಯಕೊಂಡ ಬಸವರಾಜ್ ಮತ್ತಿತರರು ಇದ್ದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *