ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ಮಂಡಿಸಿದ 15ನೇ ಬಜೆಟ್ ನಲ್ಲಿ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, 7ನೇ ವೇತನ ಆಯೋಗ ಜಾರಿಗೊಳಿಸುವುದಾಗಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಏಳನೇ ವೇತನ ಪರಿಷ್ಕರಣೆಗೆ ಆಯೋಗವನ್ನು ರಚಿಸಲಾಗಿದ್ದು, ಆಯೋಗದ ವರದಿ ಸ್ವೀಕರಿಸಿದ ನಂತರ ಪರಿಶೀಲಿಸಿ ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.
7ನೇ ವೇತನ ಆಯೋಗ ಜಾರಿಯೊಂದಿಗೆ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಆಗಲಿದೆ. ಹೋರಾಟ ಮಾಡುವ ಅಗತ್ಯವಿಲ್ಲ ಎಂದು ಸಿಎಂ ಭರವಸೆ ನೀಡಿದ್ದು, ಒಂದು ವೇಳೆ ಬೇಡಿಕೆ ಈಡೇರಿಸದ್ದಲ್ಲಿ ಹೋರಾಟ ಅನಿವಾರ್ಯ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.
ಫೆ. 27ರಂದು ರಾಜ್ಯ ಸರ್ಕಾರಿ ನೌಕರರ ಸಮ್ಮೇಳನ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಯಿಂದ ಮೂರು ಲಕ್ಷಕ್ಕೂ ಹೆಚ್ಚು ನೌಕರರು ಭಾಗವಹಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟನೆ ಮಾಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೌಕರರನ್ನು ಉದ್ದೇಶಿಸಿ ಮಾತಾಡಲಿದ್ದಾರೆ. ಡಾ.ಸಿ.ಎನ್. ಮಂಜುನಾಥ್ ನೌಕರರ ಒತ್ತಡದ ಬಗ್ಗೆ ಉಪನ್ಯಾಸ ನೀಡಲಿದ್ದು, ಹಿರಿಯ ಅಧಿಕಾರಿ ಶಾಲಿನಿ ರಜನೀಶ್ ಆಡಳಿತ ಅಭಿವೃದ್ಧಿ ಬಗ್ಗೆ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.



