ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ಆದೇಶದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ನಾಳೆ (ಮಾರ್ಚ್ 16) ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ.
ಲೋಕ ಅದಾಲತ್ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ, ರಾಜಿ ಆಗಬಹುದಾದ ಸಿವಿಲ್ ವ್ಯಾಜ್ಯ, ಮೋಟಾರ್ ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ವಿದ್ಯುತ್ ಮಂಡಳಿ ಮುಂತಾದ ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರುದ್ಧ ದಾಖಲಾದ ಪ್ರಕರಣಗಳು, ಬ್ಯಾಂಕ್, ಸಹಕಾರಿ ಸಂಘ, ಖಾಸಗಿ ವ್ಯಕ್ತಿಗಳ ನಡುವಿನ ಚೆಕ್ ಅಮಾನ್ಯ, ಹಣ ವಸುಲಾತಿ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳು, ವೈವಾಹಿಕ ಪ್ರಕರಣಗಳು ವಿವಾಹ ವಿಚ್ಛೇದನ ಹೊರತುಪಡಿಸಿ, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳು, ಕಾನೂನಿನಲ್ಲಿ ರಾಜಿ ಆಗಬಹುದಾದ ಎಲ್ಲಾ ತರಹದ ಕ್ರಿಮಿನಲ್ ಪ್ರಕರಣಗಳನ್ನು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಹಾಗೂ ಸಿವಿಲ್ ವ್ಯಾಜ್ಯಗಳಲ್ಲಿ ಪಕ್ಷಗಾರರು ಲೋಕ್-ಅದಾಲತ್ ನಲ್ಲಿ ರಾಜಿಯಾದರೆ ಪಕ್ಷಗಾರರು ಸರ್ಕಾರಕ್ಕೆ ಪಾವತಿಸಿರುವ ನ್ಯಾಯಾಲಯದ ಶುಲ್ಕವನ್ನು ವಾಪಸ್ಸು ಕೊಡಲು ಅವಕಾಶವಿದೆ.
ಲೋಕ್ ಆದಾಲತ್ನಲ್ಲಿ ಉಭಯ ಪಕ್ಷಗಾರರು ಪರಸ್ಪರ ಒಪ್ಪಿದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾಯಮೂರ್ತಿಗಳ ಆಶಯದಂತೆ ಲೋಕ್ -ಆದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯಾರ್ಥಪಡಿಸಲು ಲೋಕ್-ಆದಾಲತ್ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಸಾರ್ವಜನಿಕರು ವಿಶೇಷವಾಗಿ ಕಕ್ಷಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ಲೋಕ ಅದಾಲತ್ನ ಸದುಪಯೋಗ ಪಡಿಸಿಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ತಿಳಿಸಿದ್ದಾರೆ.



