ದಾವಣಗೆರೆ: ಇತ್ತೀಚೆಗೆ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಹಾಲಿ ಸಂಸದ ಸಿದ್ದೇಶ್ವರ ಪತ್ನಿ, ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಉದ್ದೇಶಿಸಿ ಮಹಿಳೆ ಅಡುಗೆ ಮಾಡುವುದಕ್ಕೆ ಲಾಯಕ್ಕು ಎಂದು ಕ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹೇಳಿಕೆಯನ್ನು ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ವಿರೋಧಿಸಿ ಟ್ವಿಟ್ ಮಾಡಿದ್ದರು. ಈಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹ ಹೇಳಿಕೆಯನ್ನು ಖಂಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹೆಣ್ಣು ಕುಟುಂಬದ ಕಣ್ಣು. ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆ ಖಂಡನೀಯ. ಶಾಮನೂರು ಶಿವಶಂಕರಪ್ಪ ಅವರಿಗೆ ವಯಸ್ಸಾಗಿದೆ, ಏನೋ ಲೆಕ್ಕಾಚಾರದಲ್ಲಿ ಮಾತಾಡಿದ್ದಾರೆ. ಆರು ಮಂದಿ ಹೆಣ್ಣು ಮಕ್ಕಳಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ ಎಂದರು.
ಬಿಜೆಪಿ-ಜೆಡಿಎಸ್ ಮೈತ್ರಿ ನೋಡಿ ನಾಚಿಕೆಯಾಗುತ್ತಿದೆ. ಅವತ್ತು ಹೆಚ್ಡಿ ಕುಮಾರಸ್ವಾಮಿ ಸುಮಲತಾ ಮನೆಗೆ ಹೋಗಲ್ಲ ಎಂದು ಹೇಳಿದ್ದರು. ಇವತ್ತು ಸಂಸದೆ ಸುಮಲತಾ ಮನೆಗೆ ಹೋಗುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ತೆಗೆದವರನ್ನು ಹೆಚ್ಡಿ ಕುಮಾರಸ್ವಾಮಿ ತಬ್ಬಿಕೊಂಡಿದ್ದಾರೆ. ನಾನು ವಿಷ ಹಾಕಿದೆ, ಬೆನ್ನಿಗೆ ಚೂರಿ ಹಾಕಿದೆ ಅಂತಾರೆ. ಕುಮಾರಸ್ವಾಮಿ ಅವರೆ ನಾನು ಯಾವ ಅನ್ಯಾಯ ಮಾಡಿದ್ದೆ? ಎಂದು ಪ್ರಶ್ನಿಸಿದರು.
ದಾವಣಗೆರೆ ಬಂಟರ ಭವನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಜನಪ್ರತಿನಿಧಿಗಳು, ಮುಖಂಡರ ಸಭೆಯಲ್ಲಿ ಮಾತನಾಡಿದ್ದ ಶಾಮನೂರು ಶಿವಶಂಕರಪ್ಪ, ಗಾಯತ್ರಿ ಸಿದ್ದೇಶ್ವರ್ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದರು. ಮಾತನಾಡಲು ಬಾರದ ಗಾಯತ್ರಿ ಸಿದ್ದೇಶ್ವರ್ ಅವರು ಅಡುಗೆ ಮಾಡುವುದಕ್ಕೆ ಲಾಯಕ್ಕು. ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವ ಶಕ್ತಿ ಅವರಿಗಿಲ್ಲ. ಹೀಗಾಗಿ ನಮ್ಮ ಕಾಂಗ್ರೆಸ್ಸಿಗರ ಕೈ ಮೇಲಿದೆ ಎಂಬುದನ್ನು ನಾವು ತೋರಿಸಬೇಕು ಎಂದು ಹೇಳಿದ್ದರು. ಸ್ವತಃ ಶಾಮನೂರು ಶಿವಶಂಕರಪ್ಪ ಸೊಸೆ ಸ್ಪರ್ಧೆಸಿದ್ದರೂ ಮಹಿಳೆ ಬಗ್ಗೆ ಹಗುರವಾಗಿ ಮಾತನಾಡಿದ್ದರು.



