ದಾವಣಗೆರೆ: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಕಣ ರಂಗೇರುತ್ತಿದ್ದು, ರಾಜಕೀಯ ನಾಯಕರ ಪಕ್ಷಾಂತರ ಪರ್ವ ಶುರುವಾಗಿದೆ. ಇಂದು ಜಿಲ್ಲೆಯ ಸ್ಥಳೀಯ ನಾಯಕರು ಕಾಂಗ್ರೆಸ್ ನಿಂದ ಬಿಜೆಪಿಗೆ, ಬಿಜೆಪಿಯಿಂದ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ದಾವಣಗೆರೆ ನಗರಸಭೆಯ ಮಾಜಿ ಅಧ್ಯಕ್ಷ ಶಿವನಹಳ್ಳಿ ರಮೇಶ್ ಅವರು ಕಾಂಗ್ರೆಸ್ ತೊರೆದು ಸಂಸದ ಡಾ.ಜಿ.ಎಂ. ಸಿದ್ದೇಶ್ವರ, ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಅವರೊಂದಿಗೆ ಕಾಂಗ್ರೆಸ್ ಮುಖಂಡ ಬೆಳ್ಳೊಡಿ ಮಂಜುನಾಥ್, ಶಿವನಹಳ್ಳಿಯ ಗ್ರಾಮಸ್ಥರು ಸೇರ್ಪಡೆಯಾದರು.
ಮತ್ತೊಂದೆಡೆ ಬಿಜೆಪಿಯ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಎಂ. ವಾಗೀಶ್ ಸ್ವಾಮಿ ಅವರು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಇಲಾಖೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ರ ಗೃಹ ಕಚೇರಿಯಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದರು. ವಾಗೀಶ್ ಸ್ವಾಮಿ ಜೊತೆಗೆ ಮಲೇಬೆನ್ನೂರಿನ ನಾಲ್ವರು ಪುರಸಭೆ ಸದಸ್ಯರು, ಹರಿಹರ ತಾಲೂಕಿನ ಬಿಜೆಪಿ ಮುಖಂಡರು ಸಚಿವರ ಸಮ್ಮುಖದಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ ಹರಿಹರ ಮಾಜಿ ಶಾಸಕ ಎಸ್. ರಾಮಪ್ಪ, ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.