ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಪೂರ್ವ ಮಳೆ ಅಬ್ಬರಿಸಿದ್ದು, ಇನ್ನೂ ಮೂರ್ನಾಲ್ಕು ದಿನ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಾವಣಗೆರೆ, ಉಡುಪಿ, ಶಿವಮೊಗ್ಗ, ಕೊಡಗು ಸಹಿತ ಹಲವು ಪ್ರದೇಶಗಳಲ್ಲಿ ಗುಡುಗು, ಬಿರುಗಾಳಿಯೊಂದಿಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಿಜಯಪುರ, ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಯಾದಗಿರಿ, ದಾವಣಗೆರೆ, ಬಳ್ಳಾರಿ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಪ್ರತಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷೆಯಿದೆ.
ಮೇ 15ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಮೇ 16ರಂದು ಉಡುಪಿ ಮತ್ತು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ.



