ಬೆಂಗಳೂರು: ತೀವ್ರ ಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ವಿವಿಧ ಭಾಗದಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದೆ. ಈ ಮಳೆ ಇನ್ನೂ ಐದು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 22ರಂದು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮಳೆಯಾಗುವ ಸಾಧ್ಯತೆಗಳಿವೆ. ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ತಿಳಿಸಿದೆ.
ಇದರ ಜೊತೆ ರಾಜ್ಯಕ್ಕೆ ಜೂನ್ ಮೊದಲ ವಾರವೇ ಮುಂಗಾರು ಪ್ರವೇಶವಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯ ತಜ್ಞರು ಹೇಳಿದ್ದು, ರಾಜ್ಯದ ರೈತರಿಗೆ ಶುಭ ಸೂಚನೆ ನೀಡಿದ್ದಾರೆ. ಈ ಮೂಲಕ ಮುಂಗಾರು ಬಿತ್ತನೆ ಕಾರ್ಯಕ್ಕೆ ಅಧಿಕೃತ ಚಾಲನೆ ಸಿಗಲಿದೆ. ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಜೂನ್ ಮೊದಲ ವಾರ ಜೂ.5ರಂದು ರಾಜ್ಯವನ್ನು ಪ್ರವೇಶಿಸುವ ಸಾಧ್ಯತೆಗಳಿವೆ. ಜೂನ್ 7-8ರಂದು ಮುಂಗಾರು ರಾಜ್ಯಕ್ಕೆ ಪ್ರವೇಶವಾಗುತ್ತದೆ. ಈ ಬಾರಿ ಒಂದೆರಡು ದಿನ ಮೊದಲೇ ರಾಜ್ಯದಲ್ಲಿ ಮುಂಗಾರು ಮಳೆ ಬರುವ ಸಾಧ್ಯತೆ ಇದೆ. ಕಳೆದ ವರ್ಷ ರಾಜ್ಯದಲ್ಲಿ ಮುಂಗಾರು ಮಳೆ ಪ್ರವೇಶವೇ ತಡವಾಗಿ ಇಡೀ ವರ್ಷ ನಿರೀಕ್ಷಿತ ಮಳೆ ಸುರಿಯಲಿಲ್ಲ. ಇದರಿಂದ ತೀವ್ರ ಬರ ಆವರಿಸಿತ್ತು.ಈ ಬಾರಿ ವಾಡಿಕೆಗಿಂತ ಹೆಚ್ವು ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದ ಒಳನಾಡಿನಲ್ಲಿ 0.9 ಎತ್ತರದ ವರೆಗೆ ಟ್ರಫ್ ಇದೆ. ಇದರ ಪ್ರಭಾವದಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮೇ 23ರ ವರೆಗೆ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೇ 23ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.
ಮೇ 20ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 ಕಿ.ಮೀ) ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.