ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ರಾಜ್ಯದ ಕರಾವಳಿ, ಮಲೆನಾಡು ಮತ್ತು ಒಳನಾಡಿನಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ 15 ದಿನಗಳಿಂದ ಕರಾವಳಿ ಪ್ರದೇಶಗಳಲ್ಲಿ ಧಾರಕಾರ ಮಳೆಯಾಗುತ್ತಿದೆ. ಭಾರೀ ಮಳೆಗೆ ಜನರು ತತ್ತರಿಸಿ ಹೋಗಿದ್ದು, ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ. ಈ ವಾರ ಪೂರ ವರುಣ ಆರ್ಭಟ ಜೋರಾಗಿಯೇ ಇರಲಿದೆ.ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 48 ಗಂಟೆಗಳ ಅವಧಿಯಲ್ಲಿ ಕರಾವಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಜು. 14 ರಂದು ರೆಡ್ ಅಲರ್ಟ್, ಜುಲೈ 15, 16ರಂದು ಆರೆಂಜ್ ಅಲರ್ಟ್ ನೀಡಲಾಗಿದೆ.
ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಆರೆಂಜ್ ಅಲರ್ಟ್ ನೀಡಲಾಗಿದೆ. ಜುಲೈ 14, 16 ರಂದು ಹಾಸನ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಐದು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕಲಬುರಗಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಜುಲೈ 14, 15ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಜುಲೈ 14ರಂದು ಯಾದಗಿರಿ, ಜುಲೈ 15ರಂದು ಬಾಗಲಕೋಟೆ, ಬೀದರ್ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನೂ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ ಜಿಲ್ಲೆಯಲ್ಲಿಯೂ ಜೋರು ಮಳೆಯಾಗಲಿದೆ. ಇದೇ 17ರವರೆಗೂ ಕರಾವಳಿ ಸೇರಿ ರಾಜ್ಯದ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.